ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯ ಮಧ್ಯೆ ಬೌರಿಂಗ್ ಆಸ್ಪತ್ರೆಯ ಆವರಣದಲ್ಲಿ ಭೀಕರ ದುರಂತ ಸಂಭವಿಸಿದೆ.
ಆಸ್ಪತ್ರೆಯ ಆವರಣದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿರುವುದು ದುಃಖ ಹೆಚ್ಚಿಸಿದೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪರಿಸ್ಥಿತಿಯನ್ನು ವೀಕ್ಷಿಸಿದ ಸಿಎಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಗೋಡೆ ಶಿಥಿಲವಾಗಿದ್ದ ಬಗ್ಗೆ ಮುಂಚಿತ ಪರಿಶೀಲನೆ ಮಾಡದಿರುವುದನ್ನು ಪ್ರಶ್ನಿಸಿದ್ದಾರೆ. “ಗೋಡೆ ಯಾವಾಗ ಕಟ್ಟಿದ್ದು? ಪರಿಶೀಲನೆ ಯಾಕೆ ಮಾಡಲಿಲ್ಲ?” ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಂತರ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಗಾಯಾಳುಗಳ ಆರೋಗ್ಯ ವಿಚಾರಿಸಿ, ಅವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ ಎಂದು ದೃಢಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವುದಾಗಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಆದೇಶ ನೀಡಲಾಗಿದ್ದು, ಗೋಡೆ ಶಿಥಿಲತೆ, ನಿರ್ಮಾಣ ಗುಣಮಟ್ಟ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಎಲ್ಲವನ್ನೂ ಪರಿಶೀಲಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. “ತಪ್ಪು ಯಾರದ್ದೇ ಇದ್ದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಮಳೆಯ ಕಾರಣದಿಂದ ಮಣ್ಣು ಒತ್ತಡ ಹೆಚ್ಚಾಗಿ ಗೋಡೆ ಕುಸಿದಿರಬಹುದು ಎಂಬ ಪ್ರಾಥಮಿಕ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತನಿಖೆಯ ನಂತರವೇ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



