ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗನಹಳ್ಳಿ ಗ್ರಾಮದಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಪಾಲನಜೋಗನಹಳ್ಳಿ ನಿವಾಸಿ ಪುರುಷೋತ್ತಮ (29) ಎಂದು ಗುರುತಿಸಲಾಗಿದೆ. ಅವರು ರಾಜಾನುಕುಂಟೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಬೈಕ್ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಮಾಹಿತಿಯ ಪ್ರಕಾರ, ದ್ವಿಚಕ್ರ ವಾಹನವನ್ನು ಓವರ್ಟೇಕ್ ಮಾಡಲು ಬಂದ ಕೆಎಸ್ಆರ್ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಮೇಲೆ ಬಸ್ ಹರಿದ ಪರಿಣಾಮ ಪುರುಷೋತ್ತಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



