ಬೆಂಗಳೂರು: ರಾಜ್ಯಾದ್ಯಂತ ಆಹಾರ ಮತ್ತು ಔಷಧ ಆಡಳಿತ (ಎಫ್ಡಿಎ) ಅಧಿಕಾರಿಗಳು ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಈ ವೇಳೆ ನಿಯಮಗಳನ್ನು ಉಲ್ಲಂಘಿಸಿರುವ ಎಂಟು ಕುಡಿಯುವ ನೀರಿನ ಘಟಕಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಪ್ಯಾಕೇಜ್ಡ್ ಕುಡಿಯುವ ನೀರಿನ ಉತ್ಪಾದನೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಎಫ್ಡಿಎ ಹಲವು ಕಡ್ಡಾಯ ನಿಯಮಗಳು ಹಾಗೂ ಗುಣಮಟ್ಟದ ಮಾನದಂಡಗಳನ್ನು ನಿಗದಿಪಡಿಸಿದೆ. ಕುಡಿಯುವ ನೀರಿನ ಗುಣಮಟ್ಟ ಕಾಪಾಡುವುದು ಮತ್ತು ಸಾರ್ವಜನಿಕರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಈ ನಿಯಮಗಳನ್ನು ಪಾಲಿಸುವುದು ಘಟಕಗಳಿಗೆ ಕಡ್ಡಾಯವಾಗಿದೆ.
ಆದರೆ, ಅಧಿಕಾರಿಗಳು ವಿವಿಧ ಘಟಕಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಅಗತ್ಯ ಸೌಲಭ್ಯಗಳ ಕೊರತೆ ಹಾಗೂ ನಿಯಮಗಳ ಗಂಭೀರ ಉಲ್ಲಂಘನೆಗಳು ಕಂಡುಬಂದಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎಂಟು ಘಟಕಗಳನ್ನು ಬಂದ್ ಮಾಡುವ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಪ್ಯಾಕೇಜ್ಡ್ ಕುಡಿಯುವ ನೀರಿನ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಹಾಗೂ ನಿಯಮ ಉಲ್ಲಂಘಿಸುವ ಘಟಕಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ಪರಿಶೀಲನೆ ಮತ್ತು ಕ್ರಮ ಮುಂದುವರಿಯುವ ಸಾಧ್ಯತೆಯಿದೆ.










