ದಾವಣಗೆರೆ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಮಲ್ಲಿಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಲ್ಲಿಗೆಹಳ್ಳಿ ಗ್ರಾಮದ ಗುಣವತಿ (36) ಮೃತಪಟ್ಟಿರುವ ಮಹಿಳೆ.
ಗುಣವತಿ ಅವರು ಒಂದು ದಿನದ ಹಿಂದಷ್ಟೇ ನ್ಯಾಮತಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ಬಳಿಕ ಆಸ್ಪತ್ರೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದೆ ಎನ್ನಲಾಗಿದೆ.
ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುಣವತಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ವೈದ್ಯರು ಪರಿಶೀಲಿಸುವ ವೇಳೆಗೆ ಅವರು ಮೃತಪಟ್ಟಿರುವುದು ತಿಳಿದುಬಂದಿದೆ.
ಗುಣವತಿ ಅವರ ಸಾವಿನಿಂದ ಕುಟುಂಬದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ನವಜಾತ ಹೆಣ್ಣು ಮಗು ತಾಯಿಯನ್ನು ಕಳೆದುಕೊಂಡಿದ್ದು, ಘಟನೆ ಸ್ಥಳೀಯವಾಗಿ ಆತಂಕಕ್ಕೆ ಕಾರಣವಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



