ಆನೇಕಲ್: ನಿರ್ಮಾಣ ಹಂತದ ಕಟ್ಟಡದಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದ ವೇಳೆ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ತಮಿಳುನಾಡಿನ ಹೊಸೂರು ಸಮೀಪದ ಸಿಪ್ಕಾಟ್ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಖಾಸಗಿ ಕಾರ್ಖಾನೆಯೊಂದರಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕಾರ್ಮಿಕರು ಮೋಲ್ಡ್ಗೆ ಕಾಂಕ್ರೀಟ್ ಸುರಿಯುತ್ತಿದ್ದಾಗ ಸೆಂಟ್ರಿಂಗ್ಗೆ ಅಳವಡಿಸಿದ್ದ ಮರದ ಆಧಾರಗಳು ಏಕಾಏಕಿ ಕುಸಿದುಬಿದ್ದಿವೆ. ಪರಿಣಾಮ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಕುಮರೇಶನ್ (39), ಮೈಕೆಲ್ (26) ಹಾಗೂ ಶ್ರೀನಿವಾಸನ್ (26) ಎಂದು ಗುರುತಿಸಲಾಗಿದೆ. ಗಾಯಗೊಂಡ ನಾಲ್ವರು ಕಾರ್ಮಿಕರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ
ಘಟನೆ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ದಿನೇಶ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಕ್ರೇನ್ಗಳ ನೆರವಿನಿಂದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಕಾಮಗಾರಿ ವೇಳೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದೇ ದುರಂತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.










