ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ ದುರಂತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಾರು ೨೦ ಮಂದಿ ಗಾಯಗೊಂಡಿದ್ದಾರೆ.

ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗದ ಕಂದಕಕ್ಕೆ ಉರುಳಿದೆ. ಬಸ್ನಲ್ಲಿದ್ದ ಒಟ್ಟು ೫೩ ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಗಾಯಗೊಂಡ ಸುಮಾರು ೨೦ ಮಂದಿಯನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಮಂಗಲ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



