ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೋಮವಾರ ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ರಾಮನಗರದಿಂದ ಉಧಂಪುರಕ್ಕೆ ತೆರಳುತ್ತಿದ್ದ ಬಸ್ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಬಿದ್ದಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳದಲ್ಲಿ ಸೇನೆ, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಘಟನೆ ಕುರಿತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡವರನ್ನು ವಿಮಾನ ಮೂಲಕ ಸ್ಥಳಾಂತರಿಸುವ ವ್ಯವಸ್ಥೆ ಸೇರಿದಂತೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.



