ಬೆಳಗಾವಿ: ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೆಲವು ಪ್ರದೇಶಗಳನ್ನು ಕೈಬಿಡುವಂತೆ ಕೋರಿ ಹಲವು ಮನವಿಗಳು ಸ್ವೀಕೃತವಾಗಿವೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು,
ಕೆಲವು ಪ್ರದೇಶಗಳನ್ನು ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಿಂದ ಕೈಬಿಡುವ ಸಮರ್ಪಕತೆಯನ್ನು ಪರಿಶೀಲಿಸಲು ಮಾಹಿತಿ ಕೋರಲಾಗಿದೆ. ಮಾಹಿತಿ ದೊರೆತ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಅವರು ತಿಳಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬೈಂದೂರು ಕ್ಷೇತ್ರದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಿತಿಯನ್ನು ಮರುನಿಗದಿಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ದೊರೆತ ನಂತರ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಸದನದಲ್ಲಿ ಉತ್ತರಿಸಿದರು.



