ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ತಕ್ಷಣ ರದ್ದುಪಡಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ರೈತರ ವಿರುದ್ಧ ಪ್ರಕರಣ ದಾಖಲಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ನಿಖಿಲ್ ಕುಮಾರಸ್ವಾಮಿ, “ಬಿಡದಿ ಟೌನ್ಶಿಪ್ ಹೆಸರಿನಲ್ಲಿ ಅಮಾಯಕ ರೈತರ ವಿರುದ್ಧ ಎಫ್ಐಆರ್ ದಾಖಲಿಸಿರುವ ಕಾಂಗ್ರೆಸ್ ಸರ್ಕಾರದ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.
ಯಾವುದೇ ಪೂರ್ವ ಮಾಹಿತಿ ನೀಡದೆ ರೈತರ ಭೂಮಿಗೆ ಅಧಿಕಾರಿಗಳು ಪ್ರವೇಶಿಸಿ ಜಂಟಿ ಮಾಪನ (ಜೆಎಂಸಿ) ನಡೆಸಲು ಮುಂದಾಗಿದ್ದರು. ಇದನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ ರೈತರ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಎಫ್ಐಆರ್ ಅನ್ನು ಅಸ್ತ್ರವಾಗಿ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
“ಕಾಂಗ್ರೆಸ್ ಸರ್ಕಾರದ ಈ ದಬ್ಬಾಳಿಕೆಗೆ ರೈತರು ಹೆದರುವ ಅಗತ್ಯವಿಲ್ಲ. ನಿಮ್ಮ ನ್ಯಾಯಯುತ ಹೋರಾಟಕ್ಕೆ ಅಗತ್ಯವಿರುವ ಸಂಪೂರ್ಣ ಕಾನೂನು ನೆರವು ಮತ್ತು ಬೆಂಬಲ ನೀಡಲು ನಾವು ಸದಾ ನಿಮ್ಮೊಂದಿಗಿದ್ದೇವೆ” ಎಂದು ನಿಖಿಲ್ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಇನ್ನು 48 ಗಂಟೆಗಳೊಳಗೆ ರೈತರ ವಿರುದ್ಧ ದಾಖಲಿಸಿರುವ “ಸುಳ್ಳು ಎಫ್ಐಆರ್” ಅನ್ನು ರದ್ದುಪಡಿಸಿ, ವಶಕ್ಕೆ ಪಡೆದಿರುವ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸರ್ಕಾರ ಈ ಬೇಡಿಕೆಗೆ ಸ್ಪಂದಿಸದಿದ್ದರೆ ರೈತರ ಪರವಾಗಿ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.



