ಕಾಯ್ದೆ ಉಲ್ಲಂಘಿಸುವವರ ಅಂಗಡಿ ಪರವಾನಿಗೆ ರದ್ದುಗೊಳಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು. ಕೋಟ್ಪಾ ಕಾಯ್ದೆ ಉಲ್ಲಂಘನೆಯಾದಲ್ಲಿ ಅಂತಹ ಅಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಕೋಟ್ಪಾ ಕಾಯ್ದೆ ಉಲ್ಲಂಘನೆ ಪುನರಾವರ್ತನೆ ಮಾಡಿದಲ್ಲಿ ಅಂತವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಂತಹ ಅಂಗಡಿಗಳ ವ್ಯಾಪಾರ ಪರವಾನಿಗೆ ರದ್ದುಗೊಳಿಸಬೇಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಸೇರಿದಂತೆ ಇತರ ಸ್ಥಳೀಯ ಸಂಸ್ಥೆಗಳಡಿಯಲ್ಲಿ ಎಲ್ಲ ತಂಬಾಕು ಮಾರಾಟ ಮಾಡುವ ಅಂಗಡಿಕಾರರು ಕಡ್ಡಾಯವಾಗಿ ಪ್ರತ್ಯೇಕ ತಂಬಾಕು ಮಾರಾಟ ಪರವಾನಿಗೆ ಪಡೆದುಕೊಳ್ಳಬೇಕು. ಎಲ್ಲಾ ಅಂಗಡಿ ಮುಂಗಟ್ಟುಗಳ ಮುಂದೆ ಧೂಮಪಾನ ನಿಷೇಧ ಹಾಗೂ 18 ವರ್ಷದೊಳಗಿನವರಿಗೆ ತಂಬಾಕು ನಿಷೇಧದ ಕುರಿತ ನಾಮಫಲಕ ಬಿತ್ತರಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಎನ್.ಟಿ.ಸಿ.ಪಿ ಕಾರ್ಯಕ್ರಮಾಧಿಕಾರಿ ಹಾಗೂ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಥೋಡ್ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಕುರಿತು ವಿವರಿಸುತ್ತಾ, ಜಿಲ್ಲೆಯಲ್ಲಿ ಕಳೆದ ವರ್ಷ ಒಟ್ಟು 149 ಶಾಲಾ/ಕಾಲೇಜುಗಳಲ್ಲಿ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಹಾಗೂ ಕೋಟ್ಪಾ ಕಾಯ್ದೆ ಕುರಿತು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆರೋಗ್ಯ ಅರಿವು ಕಾರ್ಯಕ್ರಮ ಹಮ್ಮಿಕೊಂಡು, ಶಾಲಾ/ಕಾಲೇಜುಗಳ ಮುಖ್ಯಸ್ಥರ ಅಧ್ಯಕ್ಷತೆಯಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚನೆ ಮಾಡಲಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರಿಗೌಡರ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿಗಳು, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಗೋಪಾಲ ಸುರಪುರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಕೋಟ್ಪಾ ದಾಳಿ ಹಮ್ಮಿಕೊಳ್ಳುವುದರ ಮೂಲಕ ವ್ಯಾಪಾರಸ್ಥರು, ತಂಬಾಕು ಬಳಕೆದಾರರಿಗೆ ಹಾಗೂ ಸಾರ್ವಜನಿಕರಲ್ಲಿ ಕೋಟ್ಪಾ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಗಿದೆ ಹಾಗೂ ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಂಡು ಈವರೆಗೆ 71 ಕೋಟ್ಪಾ ದಾಳಿ ನಡೆಸಿ 1055 ಪ್ರಕರಣಗಳನ್ನು ದಾಖಲಿಸಿ ರೂ.172350 ದಂಡ ಸಂಗ್ರಹಿಸಲಾಗಿದೆ. ಕೋಟ್ಪಾ ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ತಂಬಾಕು ವ್ಯಸನ ಮುಕ್ತ ಕೇಂದ್ರದ ಮೂಲಕ ಈ ವರ್ಷ ಒಟ್ಟು 4140 ಅರ್ಥಿಗಳಿಗೆ ಆಪ್ತ ಸಮಾಲೋಚನೆ ಮಾಡಲಾಗಿದೆ. ಸಮುದಾಯ ಮಟ್ಟದಲ್ಲಿ ಕೇಂದ್ರೀಕೃತ ಗುಂಪು ಚರ್ಚೆಯ ಮೂಲಕ ಒಟ್ಟು 78 ಎಫ್.ಜಿ.ಡಿ. ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಎಂದು ಡಾ. ವೆಂಕಟೇಶ ರಾಥೋಡ್ ಸಭೆಗೆ ತಿಳಿಸಿದರು.


Spread the love

LEAVE A REPLY

Please enter your comment!
Please enter your name here