ಬೆಂಗಳೂರು: ಕುಡಿದು ಕಾರು ಚಲಾಯಿಸಿ ಮನೆಯ ಗೋಡೆಗೆ ಡಿಕ್ಕಿ ಹೊಡೆದಿದ್ದ ವ್ಯಕ್ತಿ, ಪ್ರಶ್ನಿಸಲು ಬಂದ ಪೊಲೀಸ್ ಅಧಿಕಾರಿಯ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಕೃಷ್ಣ ಅವರಿಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಚಿನ್ ಎಂಬಾತನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದ ಸಚಿನ್, ಮನೆಯೊಂದರ ಗೋಡೆಗೆ ಕಾರು ಡಿಕ್ಕಿ ಹೊಡೆದಿದ್ದಾನೆ. ಇದನ್ನು ಗಮನಿಸಿದ ಮನೆ ಮಾಲೀಕರು ತಕ್ಷಣ 112 ಸಹಾಯವಾಣಿಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕರೆ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದ ಸಂಚಾರಿ ಪೊಲೀಸ್ ಸಿಬ್ಬಂದಿ ಅಪಘಾತದ ಬಗ್ಗೆ ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸಚಿನ್ ಪೊಲೀಸರೊಂದಿಗೆ ಅತಿರೇಕವಾಗಿ ವರ್ತಿಸಿದ್ದಾನೆ. ಬಳಿಕ ಸ್ಥಳಕ್ಕೆ ಬಂದ ಸಬ್ಇನ್ಸ್ಪೆಕ್ಟರ್ ಕೃಷ್ಣ ಅವರು ಕಾರು ಅಪಘಾತದ ಬಗ್ಗೆ ಪ್ರಶ್ನಿಸಿದ್ದಾರೆ.
ಆದರೆ, ಕುಡಿದ ಮತ್ತಿನಲ್ಲಿದ್ದ ಸಚಿನ್, ಏಕಾಏಕಿ ಸಬ್ಇನ್ಸ್ಪೆಕ್ಟರ್ ಅವರಿಗೇ ಕಪಾಳಮೋಕ್ಷ ಮಾಡಿದ್ದಾನೆ ಎನ್ನಲಾಗಿದೆ. ಇದರಿಂದ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.
ಘಟನೆ ಬಳಿಕ ಸಬ್ಇನ್ಸ್ಪೆಕ್ಟರ್ ಕೃಷ್ಣ ಅವರು ಆರೋಪಿ ವಿರುದ್ಧ ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ ಹಲ್ಲೆ ನಡೆಸಿದ ಆರೋಪದಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಬ್ಯಾಡರಹಳ್ಳಿ ಪೊಲೀಸರು ಸಚಿನ್ನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.









