ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ಸಮೀಪ ಯಲಬುರ್ಗಾ-ಬಾದಾಮಿ ರಾಜ್ಯ ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವೇಗವಾಗಿ ಬಂದ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಮೃತರನ್ನು ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದ ನಿವಾಸಿ ೫೫ ವರ್ಷದ ಈರಪ್ಪ ಎಂದು ಗುರುತಿಸಲಾಗಿದೆ.
ಅಪಘಾತದ ರಭಸಕ್ಕೆ ಕಾರು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಹೊಲಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆ ತಿಳಿಯುತ್ತಿದ್ದಂತೆ ಗಜೇಂದ್ರಗಡ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



