ಬೆಂಗಳೂರು: ನಡುರಸ್ತೆಯಲ್ಲೇ ಚಲಿಸುತ್ತಿದ್ದ ಕಾರೊಂದು ಏಕಾಏಕಿ ಹೊತ್ತಿ ಉರಿದ ಘಟನೆ ನಗರದ ಕೋರಮಂಗಲ ವಾಟರ್ ಟ್ಯಾಂಕ್ ಜಂಕ್ಷನ್ ಬಳಿ ನಡೆದಿದೆ.
ಕಾರಿನ ಇಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ಇಡೀ ವಾಹನಕ್ಕೆ ವ್ಯಾಪಿಸಿದ್ದು, ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾತ್ರಿ ಸುಮಾರು 11.30ರ ವೇಳೆಗೆ ಘಟನೆ ನಡೆದಿದ್ದು, ಕಾರು ಚಲಿಸುತ್ತಿದ್ದಾಗಲೇ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದೆ. ಇದನ್ನು ಕಂಡ ಸ್ಥಳೀಯರು ಹಾಗೂ ವಾಹನ ಸವಾರರು ಆತಂಕಗೊಂಡಿದ್ದಾರೆ.
ಕಾರಿನಲ್ಲಿದ್ದವರು ತಕ್ಷಣ ಕೆಳಗಿಳಿದ ಬಳಿಕ, ಸ್ಥಳದಲ್ಲಿದ್ದ ವಾಹನ ಸವಾರರು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಬೆಂಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಸುಟ್ಟುಹೋಗಿದೆ.
ಘಟನೆಯಿಂದ ಆಗರ–ಸರ್ಜಾಪುರ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುವಂತಾಯಿತು. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.



