ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಮತ್ತು ಸೈಕಲ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತ ಕಾರು ಚಾಲಕನನ್ನು ಕುಂದಾಪುರ ತಾಲೂಕಿನ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ (26) ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ ಉಡುಪಿಯಿಂದ ಕುಂದಾಪುರದತ್ತ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ದಾಟಿ ರಸ್ತೆ ಅಂಚಿಗೆ ಬರುತ್ತಿದ್ದ ಸೈಕಲ್ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿದ್ದ ಗ್ರಿಲ್ಗೆ ಅಪ್ಪಳಿಸಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಸೈಕಲ್ ಸವಾರ ಸ್ಥಳದಲ್ಲೇ ಸಾವು
ಅಪಘಾತದಲ್ಲಿ ಸೈಕಲ್ ಸವಾರ ಹಾಗೂ ಆರ್ಎಸ್ಎಸ್ ಮುಖಂಡ ಗುರುದಾಸ ಶೆಣೈ ಅವರು ಸೈಕಲ್ ಸಮೇತ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.
ಇತ್ತ, ಕಾರು ಚಾಲಕ ಪ್ರದೀಪ್ ಕಾಂಚನ್ ಅವರಿಗೂ ತೀವ್ರ ಗಾಯಗಳಾಗಿದ್ದರಿಂದ ಅವರನ್ನು ತಕ್ಷಣ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಪ್ರದೀಪ್ ಕಾಂಚನ್ ಉತ್ತಮ ಕ್ರಿಕೆಟ್ ಆಟಗಾರರಾಗಿದ್ದರು. ಅವಿವಾಹಿತರಾಗಿದ್ದ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









