ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಪರಿಣಾಮ ನಾಲ್ಕು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬದ ಮೂವರ ಸಾವು ಗ್ರಾಮಸ್ಥರನ್ನು ಆಘಾತಕ್ಕೀಡು ಮಾಡಿದೆ.
ಮೃತರನ್ನು ಕೊಡಗು ಜಿಲ್ಲೆಯ ಸಿದ್ದಾಪುರ ಹೈಸ್ಕೂಲ್ ಪೈಸಾರಿ ನಿವಾಸಿಗಳಾದ ವಿಜೇಶ್ (36), ಅವರ ಪತ್ನಿ ಪಮಿತ (34) ಹಾಗೂ ನಾಲ್ಕು ವರ್ಷದ ಪುತ್ರಿ ಲಿಯ ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದೆ.
ಅಕ್ಟೋಬರ್ 21ರ ರಾತ್ರಿ ವಿಜೇಶ್ ಅವರು ಪತ್ನಿ ಹಾಗೂ ಮಗಳೊಂದಿಗೆ ಸಿದ್ದಾಪುರದಿಂದ ಬಾಣಂಗಾಲ ಗ್ರಾಮದ ತಮ್ಮ ಮನೆಗೆ ಸ್ಯಾಂಟ್ರೋ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿದೆ. ಪರಿಣಾಮ ಕಾರಿನೊಳಗೆ ಸಿಲುಕಿಕೊಂಡಿದ್ದ ಮೂವರು ಹೊರಬರಲಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ರಾತ್ರಿ ವೇಳೆ ಅಪಘಾತ ಸಂಭವಿಸಿದ್ದರಿಂದ ಘಟನೆ ತಕ್ಷಣ ಯಾರ ಗಮನಕ್ಕೂ ಬಂದಿರಲಿಲ್ಲ. ಮರುದಿನ ಬೆಳಗ್ಗೆ ತೋಟದ ಕಾರ್ಮಿಕರು ಕೆರೆಯಲ್ಲಿ ಕಾರು ಬಿದ್ದಿರುವುದನ್ನು ಗಮನಿಸಿದ್ದಾರೆ. ಬಳಿಕ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ಕಾರಿನೊಳಗಿದ್ದ ಮೂವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಕೆರೆಗೆ ಉರುಳಲು ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಒಂದೇ ಕುಟುಂಬದ ಮೂವರು ದುರ್ಘಟನೆಯಲ್ಲಿ ಮೃತಪಟ್ಟಿರುವುದರಿಂದ ಬಾಡಗ ಬಾಣಂಗಾಲ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ನಾಲ್ಕು ವರ್ಷದ ಪುಟ್ಟ ಮಗು ಸೇರಿದಂತೆ ದಂಪತಿ ಸಾವನ್ನಪ್ಪಿರುವುದು ಕುಟುಂಬಸ್ಥರನ್ನು ದುಃಖದ ಮಡುವಿಗೆ ತಳ್ಳಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.









