ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಸಮೀಪದ ಗಡಿಯಾರ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ.
ಮೃತ ಚಾಲಕನನ್ನು ಹಾಸನ ಮೂಲದ ಲಕ್ಷ್ಮೀಕಾಂತ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ರಂಜಿತ್, ದರ್ಶನ್ ಹಾಗೂ ಶೋಭಾ ಎಂಬ ಮೂವರು ಸಹಪ್ರಯಾಣಿಕರು ಗಂಭೀರ ಗಾಯಗಳೊಂದಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯಾಹ್ನ ಸುಮಾರು 12 ಗಂಟೆಯ ಸಮಯದಲ್ಲಿ ನಾಲ್ವರು ಕಾರಿನಲ್ಲಿ ಮಂಗಳೂರು ಕಡೆಗೆ ಸಂಚರಿಸುತ್ತಿದ್ದರು. ಗಡಿಯಾರ ಸಮೀಪದ ತಿರುವಿನಲ್ಲಿ ವಾಹನ ತಲುಪುತ್ತಿದ್ದಂತೆ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಭೀಕರವಾಗಿ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಹಲವಾರು ಬಾರಿ ಪಲ್ಟಿ ಹೊಡೆದು ಸಂಪೂರ್ಣ ನಾಶವಾಗಿದೆ.
ಅಪಘಾತದ ತೀವ್ರತೆಗೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಹೊರತೆಗೆದಿದ್ದಾರೆ. ಬಳಿಕ ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಕ್ರೇನ್ ಸಹಾಯದಿಂದ ವಾಹನವನ್ನು ತೆರವುಗೊಳಿಸಿ ಸಂಚಾರ ಪುನಃಸ್ಥಾಪಿಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕಾರಣಗಳ ಕುರಿತು ತನಿಖೆ ನಡೆಯುತ್ತಿದೆ.



