ಯಾದಗಿರಿ: ನಿರ್ಮಾಣ ಹಂತದ ಚೆನ್ನೈ-ಸೂರತ್ ಎಕ್ಸ್ಪ್ರೆಸ್ ಹೈವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂ ಡಿಬಿಎಲ್ ಕ್ಯಾಂಪ್ ಸಮೀಪ ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ಗುರುರಾಜ್ ಚವ್ಹಾಣ್ (35), ರೆಡ್ಡಿ ರಾಠೋಡ್ (33), ಗೋವಿಂದ ಚವ್ಹಾಣ್ (28) ಹಾಗೂ ಕುಮಾರ ರಾಠೋಡ್ (26) ಎಂದು ಗುರುತಿಸಲಾಗಿದೆ. ಮೃತರ ಪೈಕಿ ಮೂವರು ಮಲ್ಹಾರ್ ತಾಂಡಾದ ನಿವಾಸಿಗಳಾಗಿದ್ದು, ಮತ್ತೊಬ್ಬರು ಲಿಂಗೇರಿ ತಾಂಡಾದವರು ಎಂದು ತಿಳಿದುಬಂದಿದೆ.
ನಾಲ್ವರು ಯುವಕರು ಕಾರಿನಲ್ಲಿ ಜೇವರ್ಗಿಯಿಂದ ಯಾದಗಿರಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ರಾತ್ರಿ ಸುಮಾರು 11:30ರ ಹೊತ್ತಿಗೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಗೋಡೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಒಂದೇ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದೆ.










