ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹರಿಯಾಣದ ಸೋನಿಪತ್ನಲ್ಲಿ ಸಮೀರ್ ಮತ್ತು ಜತಿನ್ ಎಂಬ ಆರೋಪಿಗಳನ್ನು ಮುಂಬೈ ಪೊಲೀಸರ ಅಪರಾಧ ವಿಭಾಗದ ಅಧಿಕಾರಿಗಳು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಗುಂಡಿನ ದಾಳಿ ಪ್ರಕರಣದಲ್ಲಿ ಬಳಸಲಾಗಿದೆ ಎನ್ನಲಾದ ಶಸ್ತ್ರಾಸ್ತ್ರಗಳನ್ನು ಪೂರೈಸಿದ ಆರೋಪ ಸಮೀರ್ ಮತ್ತು ಜತಿನ್ ಮೇಲಿದೆ. ಸದ್ಯ ಆರೋಪಿಗಳ ವಿರುದ್ಧದ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದು, ಸೋನಿಪತ್ ನ್ಯಾಯಾಲಯಕ್ಕೆ ಹಾಜರುಪಡಿಸಿ ಟ್ರಾನ್ಸಿಟ್ ರಿಮಾಂಡ್ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಮುಂಬೈಗೆ ಕರೆತರಲಾಗುತ್ತದೆ.
ದಾಳಿಯ ಹಿಂದಿನ ಉದ್ದೇಶವೇನು?
ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದವರು ಯಾರು? ಈ ಕೃತ್ಯಕ್ಕೆ ಬಳಸಿದ ಶಸ್ತ್ರಾಸ್ತ್ರಗಳನ್ನು ಎಲ್ಲಿಂದ ತರಲಾಗಿತ್ತು? ದಾಳಿಯ ಹಿಂದಿನ ಉದ್ದೇಶವೇನು? ಎಂಬ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇನ್ನು, ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಕೋಟಾದಿಂದ ಬಂಧಿಸಲಾಗಿದ್ದ ಮೂವರು ಆರೋಪಿಗಳನ್ನು ಬುಧವಾರ ಮುಂಬೈನ ಎಸ್ಪ್ಲನೇಡ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಮುಂಬೈ ಪೊಲೀಸರ ಸುಲಿಗೆ ವಿರೋಧಿ ಘಟಕವು ಆರೋಪಿಗಳನ್ನು ಬೆಳಗಿನ ಜಾವ 3 ಗಂಟೆ ಸುಮಾರಿಗೆ ನಗರಕ್ಕೆ ಕರೆತಂದಿತ್ತು ಎಂದು ವರದಿಯಾಗಿದೆ.
ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ವಿಚಾರಣೆ ವೇಳೆ ಬಂಧನದ ಸಮಯದ ಕುರಿತು ನ್ಯಾಯಾಲಯ ಪೊಲೀಸರನ್ನು ಪ್ರಶ್ನಿಸಿತ್ತು. ಆರೋಪಿಗಳ ಪೈಕಿ ಒಬ್ಬಾತ ಅಕ್ಟೋಬರ್ 19ರ ಬೆಳಗ್ಗೆ ತನ್ನನ್ನು ಬಂಧಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾನೆ.
ದಾಳಿಯ ಹಿಂದಿನ ಉದ್ದೇಶವನ್ನು ಪತ್ತೆಹಚ್ಚಲು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ಪೊಲೀಸರು 14 ದಿನಗಳ ಕಸ್ಟಡಿಗೆ ಮನವಿ ಸಲ್ಲಿಸಿದ್ದರೂ, ನ್ಯಾಯಾಲಯ ಮೂವರು ಆರೋಪಿಗಳನ್ನು ಅಕ್ಟೋಬರ್ 31ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.










