ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ನಡೆದ ಒಂದೇ ಕುಟುಂಬದ ಏಳು ಮಂದಿಯ ಭೀಕರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ನಂದಿಬೆಟ್ಟದ ಕಾಡಿನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ನಂದಿಬೆಟ್ಟದ ರಂಗಪ್ಪ ಸರ್ಕಲ್ ರಸ್ತೆಯ ಎಡಭಾಗದಲ್ಲಿರುವ ಅರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತದೇಹ ಪತ್ತೆಯಾದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಶವವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಏಳು ಜನರ ಹತ್ಯೆ ಪ್ರಕರಣದ ಆರೋಪಿ ಇಂದುಶೇಖರ್ನನ್ನು ಪೊಲೀಸರು ನಂದಿಬೆಟ್ಟಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಆರೋಪಿ ನೀಡಿರುವ ಮಾಹಿತಿಯ ಆಧಾರದ ಮೇಲೆ ಮೃತದೇಹಗಳನ್ನು ಎಸೆದಿರುವ ಶಂಕಿತ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಈಗಾಗಲೇ ಒಂದು ಮೃತದೇಹ ಪತ್ತೆಯಾಗಿದ್ದು, ಉಳಿದ ಆರು ಮೃತದೇಹಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನಂದಿಬೆಟ್ಟದ ಸ್ಕಂದಗಿರಿ ಪ್ರದೇಶದಲ್ಲಿಯೂ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಇದಲ್ಲದೆ, ತಮಿಳುನಾಡಿನ ಸೇಲಂ ಪ್ರದೇಶದಲ್ಲಿಯೂ ಮೃತದೇಹಗಳಿಗಾಗಿ ಹುಡುಕಾಟ ನಡೆಸಲು ವಿಶೇಷ ಪೊಲೀಸ್ ತಂಡವನ್ನು ಕಳುಹಿಸಲಾಗಿದೆ. ಆರೋಪಿ ಇಂದುಶೇಖರ್ ನೀಡಿರುವ ಹೇಳಿಕೆಯ ಆಧಾರದ ಮೇಲೆ ವಿವಿಧ ಪ್ರದೇಶಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.










