ದಾವಣಗೆರೆ: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಹರಿಹರ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್ ಅವರ ಬಂಧನಕ್ಕೆ ವಾರೆಂಟ್ ಹೊರಡಿಸಿದೆ.
ಪ್ರಕರಣದ ವಿಚಾರಣೆಗೆ ಪದೇಪದೇ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಬಂಧನ ವಾರೆಂಟ್ ಜಾರಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ ಮೇ 7ರಂದು ಶಾಸಕರನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ಹರಿಹರ ನಗರ ಪೊಲೀಸ್ ಠಾಣಾಧಿಕಾರಿಗೆ ನ್ಯಾಯಾಲಯ ಆದೇಶ ನೀಡಿದೆ.
2023ರ ವಿಧಾನಸಭಾ ಚುನಾವಣಾ ಫಲಿತಾಂಶದ ಮರುದಿನ ದಲಿತ ಸಮುದಾಯದ ಬಗ್ಗೆ ಶಾಸಕ ಬಿ.ಪಿ. ಹರೀಶ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಹರಿಹರ ಬಿಎಸ್ಪಿ ಮುಖಂಡ ಹನುಮಂತಪ್ಪ ಅವರು ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದಲ್ಲಿ ಹೈಕೋರ್ಟ್ ಆದೇಶದ ಬಳಿಕ ಪೊಲೀಸರು ಸಕ್ರಿಯವಾಗಿದ್ದು, ಮುಂದಿನ ಕ್ರಮಕ್ಕಾಗಿ ಪರಿಶೀಲನೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.



