HomePolitics Newsಅ. 11ರಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ: ಆರು ದಿನಗಳ ಕಾರ್ಯಕ್ರಮಕ್ಕೆ ಸಿದ್ಧತೆ!

ಅ. 11ರಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ: ಆರು ದಿನಗಳ ಕಾರ್ಯಕ್ರಮಕ್ಕೆ ಸಿದ್ಧತೆ!

For Dai;y Updates Join Our whatsapp Group

ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಕಾವೇರಿ ಆರತಿ ಆಯೋಜನೆ ಕುರಿತು ಬುಧವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಳೆದ ಬಾರಿ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೇ ಈ ಬಾರಿಯೂ ಬಳಸಿಕೊಂಡು ಕಾರ್ಯಕ್ರಮವನ್ನು ಸಂಪ್ರದಾಯಬದ್ಧವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸುವಂತೆ ಸೂಚಿಸಿದರು.

ಕೆಆರ್‌ಎಸ್‌ನಲ್ಲಿ ಕಳೆದ ವರ್ಷ ಮೊದಲ ಬಾರಿಗೆ ಕಾವೇರಿ ಆರತಿ ಆರಂಭಿಸಲಾಗಿತ್ತು. ಈ ವರ್ಷವೂ ಕಾರ್ಯಕ್ರಮವನ್ನು ಮುಂದುವರಿಸಲಾಗುತ್ತಿದ್ದು, ರಾಜ್ಯದ ಸಂಪ್ರದಾಯ ಮತ್ತು ಸಂಸ್ಕೃತಿಗೆ ಅನುಗುಣವಾಗಿ ಕಾರ್ಯಕ್ರಮ ನಡೆಸಲಾಗುವುದು ಎಂದು ಸಚಿವರು ಹೇಳಿದರು.

ಅಕ್ಟೋಬರ್ 11ರಿಂದ ಆರಂಭವಾಗುವ ಕಾವೇರಿ ಆರತಿ ಆರು ದಿನಗಳ ಕಾಲ ನಡೆಯಲಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಪಾರ್ಕಿಂಗ್ ಸ್ಥಳದಿಂದ ವೇದಿಕೆಯವರೆಗೆ ಉಚಿತ ಬಸ್ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ ರಸ್ತೆ ವ್ಯವಸ್ಥೆ, ವಾರ್ತಾ ಇಲಾಖೆಯಿಂದ ಪ್ರಚಾರ, ಮುಜರಾಯಿ ಇಲಾಖೆಯಿಂದ ಅರ್ಚಕರ ನೇಮಕ ಹಾಗೂ ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಭವ್ಯ ವೇದಿಕೆ, ಧ್ವನಿ ಮತ್ತು ಬೆಳಕು ವ್ಯವಸ್ಥೆ, ವಾದ್ಯ, ಪೂಜಾ ಸಾಮಗ್ರಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ. ಕಳೆದ ಬಾರಿಯ ಕಾರ್ಯಕ್ರಮದಲ್ಲಿ ಕಂಡುಬಂದ ಲೋಪದೋಷಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಸೂಕ್ತವಾಗಿ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯಕ್ರಮದ ಸ್ಥಳದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

ಕಳೆದ ಬಾರಿಯ ಮೇಲ್ವಿಚಾರಕರೊಂದಿಗೆ ಚರ್ಚೆ:

ಕಳೆದ ವರ್ಷದ ಕಾವೇರಿ ಆರತಿ ಕಾರ್ಯಕ್ರಮದ ಮೇಲ್ವಿಚಾರಣೆ ವಹಿಸಿದ್ದ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಮಪ್ರಸಾದ್ ಅವರೊಂದಿಗೆ ಸಚಿವರು ವಿಡಿಯೋ ಕರೆ ಮೂಲಕ ಚರ್ಚಿಸಿದರು. ಈ ಬಾರಿಯೂ ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಂಡು ಆರು ದಿನಗಳ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಿ ಸ್ಥಳೀಯ ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ಮನವಿ ಮಾಡಿದರು.

ಸಭೆಯಲ್ಲಿ ಕಾವೇರಿ ಪ್ರತಿಮೆ ನಿರ್ಮಾಣ, ಪೂಜಾ ವಿಧಿವಿಧಾನಗಳು ಹಾಗೂ ವಾರಣಾಸಿಯ ಅರ್ಚಕರ ತಂಡದ ವಾಸ್ತವ್ಯ ಸೇರಿದಂತೆ ವಿವಿಧ ವ್ಯವಸ್ಥೆಗಳ ಕುರಿತು ಚರ್ಚೆ ನಡೆಯಿತು.

ಆರು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸಂಜೆ ಹಾಗೂ ಹಾಸ್ಯ ಸಂಜೆ ಆಯೋಜಿಸಲು ನಿರ್ಧರಿಸಲಾಗಿದೆ.

ಸಭೆಯಲ್ಲಿ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ, ಜಿಪಂ ಸಿಇಒ ನಂದಿನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯುಕ್ತೆ ಮಂಜುಶ್ರೀ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img