ನವದೆಹಲಿ: ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ಕರ್ನಾಟಕದಿಂದ ಬಾಕಿ ಇರುವ 11 ಟಿಎಂಸಿ ಹೆಚ್ಚುವರಿ ನೀರನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸಲ್ಲಿಸಿದ್ದ ಎರಡು ಮಧ್ಯಂತರ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಪರೇಶ್ ಕುಮಾರ್ ಸಿಂಗ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶಗಳನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂದು ಆರೋಪಿಸಿದ್ದ ತಮಿಳುನಾಡು, ಹೆಚ್ಚುವರಿ ನೀರು ಬಿಡುಗಡೆಗೆ ನ್ಯಾಯಾಲಯದ ನಿರ್ದೇಶನ ಕೋರಿತ್ತು. ಆದರೆ, ಕರ್ನಾಟಕಕ್ಕೆ ನೀರು ಬಿಡುಗಡೆ ಮಾಡುವಂತೆ ಯಾವುದೇ ನಿರ್ದೇಶನ ನೀಡಲು ನ್ಯಾಯಾಲಯ ನಿರಾಕರಿಸಿದೆ.
11.719 ಟಿಎಂಸಿ ನೀರಿನ ಕೊರತೆಯಾಗಿದೆ ಎಂದು ತಮಿಳುನಾಡು ವಾದ
ಅಂತರರಾಜ್ಯ ಗಡಿಯಲ್ಲಿರುವ ಬಿಳಿಗುಂಡ್ಲು ಅಳತೆ ಕೇಂದ್ರದಲ್ಲಿ ಅಕ್ಟೋಬರ್ 6ರವರೆಗೆ ತಮಿಳುನಾಡಿಗೆ ತಲುಪಬೇಕಿದ್ದ ನೀರಿನ ಪ್ರಮಾಣದಲ್ಲಿ 11.719 ಟಿಎಂಸಿ ಕೊರತೆಯಾಗಿದೆ ಎಂದು ತಮಿಳುನಾಡು ನ್ಯಾಯಾಲಯದ ಮುಂದೆ ವಾದಿಸಿತ್ತು.
ಕರ್ನಾಟಕದಲ್ಲಿ ಸಾಕಷ್ಟು ನೀರಿನ ಸಂಗ್ರಹವಿದ್ದರೂ, ತಮಗೆ ಹಂಚಿಕೆಯಾದ ನೀರನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ತಮಿಳುನಾಡು ಆರೋಪಿಸಿತ್ತು. ನೀರಿನ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ಬೆಳೆಗಳಿಗೆ ಹಾನಿಯಾಗುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿತ್ತು.
ಕರ್ನಾಟಕದ ವಾದವನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್
ಮಳೆಯ ಕೊರತೆಯಿಂದಾಗಿ ತಮಗೆ ಹಂಚಿಕೆಯಾದ ಕಾವೇರಿ ನೀರು ಸಮರ್ಪಕವಾಗಿ ದೊರೆಯುತ್ತಿಲ್ಲ ಹಾಗೂ ಸುಮಾರು 11 ಟಿಎಂಸಿ ನೀರಿನ ಕೊರತೆಯಿಂದ ಕೃಷಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ತಮಿಳುನಾಡು ಕಳೆದ ಆಗಸ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.
ಇದಕ್ಕೆ ಪ್ರತಿಯಾಗಿ ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶಗಳನ್ನು ಚಾಚೂತಪ್ಪದೆ ಪಾಲಿಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿತ್ತು. ಕರ್ನಾಟಕದ ವಾದ ಹಾಗೂ ತಮಿಳುನಾಡು ಸಲ್ಲಿಸಿದ್ದ ಮಧ್ಯಂತರ ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಾಲಯ, ಹೆಚ್ಚುವರಿ ನೀರು ಬಿಡುಗಡೆಗೆ ನಿರ್ದೇಶನ ನೀಡುವ ಮನವಿಯನ್ನು ವಜಾಗೊಳಿಸಿದೆ.









