ಮಂಡ್ಯ: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು. ಒಂದು ವೇಳೆ ನೀರು ಹರಿಸಿದರೆ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲೇ ಕುಡಿಯುವ ನೀರಿನ ಅಭಾವ ಎದುರಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ CWRC ಯಾವ ಮಾನದಂಡದ ಆಧಾರದ ಮೇಲೆ ನೀರು ಬಿಡುವಂತೆ ಆದೇಶ ನೀಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.
“ನಮ್ಮ ಜನರಿಗೆ ಕುಡಿಯಲು ನೀರಿಲ್ಲದ ಪರಿಸ್ಥಿತಿ ಇದೆ. ಆದರೆ ತಮಿಳುನಾಡಿನವರು ಬೆಳೆಗಳಿಗೆ ನೀರು ಕೇಳುತ್ತಿದ್ದಾರೆ. ಸ್ಥಳೀಯ ವಾಸ್ತವ ಸ್ಥಿತಿಯನ್ನು ಅರಿತುಕೊಂಡು ಪ್ರಾಧಿಕಾರ ನಿರ್ಧಾರ ಕೈಗೊಳ್ಳಬೇಕಿತ್ತು” ಎಂದು ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದಾರೆ.
15 ದಿನಗಳ ಕಾಲ ನೀರು ಹರಿಸುವಂತೆ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಬಾರದು. ಕಾನೂನು ಹೋರಾಟದ ಮೂಲಕ ರಾಜ್ಯದ ಪರಿಸ್ಥಿತಿಯನ್ನು ಪ್ರಾಧಿಕಾರದ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿ ವರ್ಷವೂ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸಮಸ್ಯೆ ಎದುರಾಗುತ್ತಿದೆ. ಬೆಂಗಳೂರು ಸೇರಿದಂತೆ ಕಾವೇರಿ ನೀರನ್ನು ಅವಲಂಬಿಸಿರುವ ಪ್ರತಿಯೊಬ್ಬರೂ ಜನ-ಜಾನುವಾರುಗಳ ರಕ್ಷಣೆಗೆ ಹೋರಾಟಕ್ಕೆ ಸಜ್ಜಾಗಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಕರೆ ನೀಡಿದ್ದಾರೆ.



