ವಿಜಯಸಾಕ್ಷಿ ಸುದ್ದಿ, ಗದಗ: ಸೆಪ್ಟೆಂಬರ್ 17ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಶ್ರೀ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶ್ರೀ ವಿಶ್ವಕರ್ಮ ಜಯಂತಿ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಶಿಷ್ಠಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಒಟ್ಟಾರೆಯಾಗಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಸಭೆಯಲ್ಲಿ ಉಪನ್ಯಾಸಕರ ಆಯ್ಕೆ, ವೇದಿಕೆ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಸಮಾಜದ ಬಾಂಧವರು, ಹಿರಿಯರು, ಗಣ್ಯರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸ್ವಾಗತಿಸಿ ವಂದಿಸಿದರು.