ಬೀದರ್: ನಗರದ ನೆಹರು ಸ್ಟೇಡಿಯಂ ಬಳಿ ಗ್ರಾಮೀಣ ಭಾಗದ ಬಡ ಕ್ರೀಡಾಪಟು ಮಕ್ಕಳಿಗಾಗಿ ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಎರಡು ಅಂತಸ್ತಿನ ವಸತಿ ನಿಲಯದ ಕಾಮಗಾರಿಯಲ್ಲಿ ಕಳಪೆ ಆರೋಪ ಕೇಳಿಬಂದಿದೆ.
ಈಗಾಗಲೇ ಕಟ್ಟಡದ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಮೇಲ್ಚಾವಣಿ, ಶೌಚಾಲಯ, ಬಾಗಿಲು ಸೇರಿದಂತೆ ಹಲವು ಭಾಗಗಳಲ್ಲಿ ಗುಣಮಟ್ಟದ ಕೊರತೆ ಕಂಡುಬಂದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೇಲ್ಚಾವಣಿಯ ಸಿಮೆಂಟ್ ಕಾಂಕ್ರೀಟ್ ಕಿತ್ತುಬರುತ್ತಿರುವುದು ಕೂಡ ಕಂಡುಬಂದಿದ್ದು, ಕಾಮಗಾರಿಯ ಗುಣಮಟ್ಟದ ಬಗ್ಗೆ ಪ್ರಶ್ನೆ ಮೂಡಿದೆ.
ಗ್ರಾಮೀಣ ಭಾಗದ ನೂರಾರು ಕ್ರೀಡಾಪಟು ಮಕ್ಕಳಿಗಾಗಿ ನಿರ್ಮಿಸಲಾಗುತ್ತಿರುವ ಈ ವಸತಿ ನಿಲಯ ಇನ್ನೂ ಉದ್ಘಾಟನೆಯಾಗಿಲ್ಲ. ಆದರೆ, ಉದ್ಘಾಟನೆಗೂ ಮುನ್ನವೇ ಕಳಪೆ ಕಾಮಗಾರಿಯ ಆರೋಪ ಕೇಳಿಬಂದಿರುವುದು ಚರ್ಚೆಗೆ ಕಾರಣವಾಗಿದೆ.
ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಕ್ರೀಡಾ ಇಲಾಖೆ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕೋಟ್ಯಂತರ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡದ ಕಾಮಗಾರಿಯನ್ನು ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರನ್ನು ಕೇಳಿದಾಗ, ಕಳಪೆ ಕಾಮಗಾರಿಯ ಆರೋಪದ ಬಗ್ಗೆ ತನಿಖೆ ನಡೆಸಲಾಗುವುದು. ವರದಿ ಬಂದ ಬಳಿಕ ತಪ್ಪಿತಸ್ಥರು ಕಂಡುಬಂದರೆ ಯಾವುದೇ ಮುಲಾಜಿಲ್ಲದೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.



