ನವದೆಹಲಿ: ದೇಶಾದ್ಯಂತ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮತ್ತಷ್ಟು ಕಠಿಣ ಕಾನೂನು ಜಾರಿಗೆ ಮುಂದಾಗಿದೆ. ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ–2024ಕ್ಕೆ ತಿದ್ದುಪಡಿ ತರಲು ಸರ್ಕಾರ ಸಿದ್ಧತೆ ನಡೆಸಿದ್ದು, ತಪ್ಪಿತಸ್ಥರಿಗೆ ಗರಿಷ್ಠ 10 ವರ್ಷ ಜೈಲು ಶಿಕ್ಷೆ ಹಾಗೂ ₹1 ಕೋಟಿ ದಂಡ ವಿಧಿಸುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಶೀಘ್ರವೇ ಅನುಮೋದನೆ ನೀಡುವ ಸಾಧ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ವಿಡಿಯೋ ಸಂದೇಶದಲ್ಲಿ ಘೋಷಿಸಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.
ಮೂಲಗಳ ಪ್ರಕಾರ, ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ–2024ಕ್ಕೆ ತಿದ್ದುಪಡಿ ತರುವ ಪ್ರಸ್ತಾವವನ್ನು ಶುಕ್ರವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ. ತಿದ್ದುಪಡಿ ಜಾರಿಯಾದರೆ ಪರೀಕ್ಷಾ ಅಕ್ರಮಗಳ ತನಿಖೆ ಮತ್ತು ವಿಚಾರಣೆಯನ್ನು ತ್ವರಿತಗೊಳಿಸಲು ವಿಶೇಷ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳ ಸ್ಥಾಪನೆಗೂ ಕಾನೂನು ಮಾನ್ಯತೆ ಸಿಗಲಿದೆ.
ಪ್ರಸ್ತುತ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ 3 ರಿಂದ 5 ವರ್ಷಗಳ ಜೈಲು ಶಿಕ್ಷೆ ಹಾಗೂ ₹10 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವಿದೆ. ಆದರೆ ಹೊಸ ತಿದ್ದುಪಡಿಯಡಿ ಶಿಕ್ಷೆಯನ್ನು 5 ರಿಂದ 10 ವರ್ಷಗಳಿಗೆ ಹೆಚ್ಚಿಸುವ ಜೊತೆಗೆ, ದಂಡವನ್ನು ₹1 ಕೋಟಿವರೆಗೆ ಏರಿಸಲು ಸರ್ಕಾರ ಮುಂದಾಗಿದೆ.



