ಬೆಳಗಾವಿ:-ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಶತಮಾನದ ಸಂಭ್ರಮ ಮನೆ ಮಾಡಿದ್ದು, ಐತಿಹಾಸಿಕ ಕ್ಷಣಕ್ಕೆ ಕುಂದಾನಗರಿ ಸಾಕ್ಷಿ ಆಗುತ್ತಿದೆ.
1924ರ ಡಿಸೆಂಬರ್ 26 ಹಾಗೂ 27ರಂದು ಮಹಾತ್ಮ ಗಾಂಧೀಜಿ ಬೆಳಗಾವಿ ಭೇಟಿ ನೀಡಿ, ಕಾಂಗ್ರೆಸ್ ಅಧಿವೇಶದಲ್ಲಿ ಭಾಗಿಯಾಗಿದ್ದರು. ಈ ಅಧಿವೇಶನಕ್ಕೆ 100 ವರ್ಷಗಳಾದ ಹಿನ್ನಲೆ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡುತ್ತಿದೆ.
ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ದೇಶದ ವಿವಿಧೆಡೆಯಿಂದ ಕಾಂಗ್ರೆಸ್ ನಾಯಕರ ದಂಡೇ ಬರತೊಡಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಪ್ರಮುಖರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಹಿಮಾಚಲ ಪ್ರದೇಶ ಮುಖ್ಯ ಮಂತ್ರಿ ಸುಖ್ವಿಂದರ್ ಸಿಂಗ್ ಸುಕ್ಕು, ಮಾಜಿ ಕೇಂದ್ರ ಸಚಿವ ಶಶಿ ತರೂರ್, ಕಾಂಗ್ರೆಸ್ ಯುವ ನಾಯಕ ಕನ್ನಯ್ಯಾ ಕುಮಾರ ಗುರುವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸಿದರು.
ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ನೇತೃತ್ವ ತಂಡದಿಂದ ಮುಖಂಡರುಗಳಿಗೆ ಸ್ವಾಗತ ಕೋರಲಾಯಿತು. ಲಂಬಾಣಿ ಹಾಡು ನೃತ್ಯದ ಮೂಲಕ ಯುವತಿಯರಿಂದ ಸ್ವಾಗತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಪ್ರಯುಕ್ತ ಬೆಳಗಾವಿ ನಗರದೆಲ್ಲೆಡೆ ಕಾಂಗ್ರೆಸ್ ಬಾವುಟ, ನಾಯಕರ ಕಟೌಟ್ ರಾರಾಜಿಸುತ್ತಿವೆ.
ಖರ್ಗೆ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ 200ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ.
ಶುಕ್ರವಾರ ಬೆಳಗ್ಗೆ 10.30ಕ್ಕೆ ಸುವರ್ಣಸೌಧದಲ್ಲಿ ಗಾಂಧೀಜಿ ಪುತ್ಥಳಿ ಅನಾವರಣಗೊಳ್ಳಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ಥಳಿ ಅನಾವರಣ ಮಾಡಲಿದ್ದಾರೆ. ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿ ‘ಕೈ’ ನಾಯಕರು ಭಾಗಿಯಾಗಲಿದ್ದಾರೆ.



