ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತೊಂಡವಾಡಿ ಗ್ರಾಮದಲ್ಲಿ ಫಾಸ್ಟ್ ಫುಡ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಮಾಲೀಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.
ತೊಂಡವಾಡಿ ಗ್ರಾಮದಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ಮಣಿಕಂಠ ಎಂಬುವವರು ಇಂದು ಮಧ್ಯಾಹ್ನ ಗೋಬಿ ಸೇರಿದಂತೆ ಆಹಾರ ಪದಾರ್ಥಗಳನ್ನು ತಯಾರಿಸುತ್ತಿದ್ದ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ತೀವ್ರವಾಗುತ್ತಿದ್ದಂತೆ ಅಂಗಡಿಯಲ್ಲಿ ಅವಘಡ ಸಂಭವಿಸಿದ್ದು,
ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಎಚ್ಚೆತ್ತ ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ನಂತರ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಬೆಂಕಿ ಅನಾಹುತದಿಂದ ಆಹಾರ ಪದಾರ್ಥಗಳು, ಬಟ್ಟೆಬರೆಗಳು ಹಾಗೂ ಧವಸಧಾನ್ಯಗಳು ಸಂಪೂರ್ಣವಾಗಿ ಭಸ್ಮವಾಗಿದ್ದು, ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ.ಘಟನೆಯಲ್ಲಿ ಅಂಗಡಿ ಮಾಲೀಕ ಮಣಿಕಂಠನ ಕೈ ಹಾಗೂ ಕಾಲುಗಳಿಗೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಯ ಕುರಿತು ತನಿಖೆ ಕೈಗೊಂಡಿದ್ದಾರೆ.



