ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿಗೆ ವಾಚರ್ ಬಲಿಯಾದ ಘಟನೆ ಸಂಬಂಧ ಮೃತನ ಕುಟುಂಬಸ್ಥರು ಸೂಕ್ತ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿದ್ದಾರೆ.
ಹುಲಿ ದಾಳಿಗೆ ಬಲಿಯಾದ ವಾಚರ್ ಸಣ್ಣಹೈದ ಮೃತದೇಹವನ್ನು ಸ್ವೀಕರಿಸಲು ಕುಟುಂಬಸ್ಥರು ನಿರಾಕರಿಸಿದ್ದು, ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಪ್ರಭಾಕರ್ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯ ಬಳಿಕ ಅರಣ್ಯ ಇಲಾಖೆ ವತಿಯಿಂದ 15 ಲಕ್ಷ ರೂಪಾಯಿ ಪರಿಹಾರದ ಭರವಸೆ ನೀಡಲಾಗಿದ್ದರೂ, ಕುಟುಂಬಸ್ಥರು ಇದಕ್ಕೆ ಒಪ್ಪದೇ, ಪರಿಹಾರದ ಜೊತೆಗೆ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಉದ್ಯೋಗ ಹಾಗೂ ಶಾಶ್ವತ ಪರಿಹಾರ ಘೋಷಿಸುವವರೆಗೆ ಮೃತದೇಹವನ್ನು ಪಡೆಯುವುದಿಲ್ಲ ಎಂದು ಕುಟುಂಬಸ್ಥರು ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.



