ಬೆಂಗಳೂರು: ರಾಜಧಾನಿ ಬೆಂಗಳೂರಿನ ಪೂರ್ವ ಭಾಗದಲ್ಲಿ ಸುರಿದ ದಿಢೀರ್ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಪಣತ್ತೂರು ರೈಲ್ವೆ ಅಂಡರ್ಪಾಸ್ ಸಂಪೂರ್ಣ ಜಲಾವೃತಗೊಂಡಿದ್ದು, ನೀರಿನಲ್ಲಿ ಕಾರೊಂದು ತೇಲಾಡಿದ ಆತಂಕಕಾರಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೆಲವೇ ಗಂಟೆಗಳ ಕಾಲ ಸುರಿದ ಮಳೆಯಿಂದ ಅಂಡರ್ಪಾಸ್ನಲ್ಲಿ ಭಾರೀ ಪ್ರಮಾಣದ ನೀರು ಸಂಗ್ರಹವಾಗಿದೆ. ಮಳೆ ನೀರು ಸರಾಗವಾಗಿ ಹರಿದುಹೋಗಲು ಸೂಕ್ತ ವ್ಯವಸ್ಥೆ ಇಲ್ಲದಿರುವುದೇ ಈ ಅವಾಂತರಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.
ಈ ಹಿಂದೆ ಅಂಡರ್ಪಾಸ್ನ ನೀರು ಹೊರಹೋಗಲು ಚರಂಡಿ ಮತ್ತು ಪೈಪ್ಲೈನ್ಗಳನ್ನು ಅಳವಡಿಸಲಾಗಿತ್ತು. ಆದರೆ, ಇತ್ತೀಚಿನ ಕಾಮಗಾರಿಯ ವೇಳೆ ಪೈಪ್ಲೈನ್ಗಳ ಮೇಲೆ ಮಣ್ಣಿನ ರಾಶಿ ಸುರಿದು ಮುಚ್ಚಲಾಗಿದೆ ಎನ್ನಲಾಗಿದೆ. ಇದರಿಂದ ನೀರು ಹರಿದುಹೋಗುವ ಮಾರ್ಗ ಬಂದ್ ಆಗಿ, ಮಳೆ ನೀರು ಅಂಡರ್ಪಾಸ್ನಲ್ಲೇ ಸಂಗ್ರಹವಾಗಿದೆ.
ಸದ್ಯ ಅಂಡರ್ಪಾಸ್ನಲ್ಲಿ ನೀರು ತುಂಬಿಕೊಂಡಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ವಾಹನ ಸವಾರರು ಹಾಗೂ ಸ್ಥಳೀಯರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆಗಾಲದಲ್ಲಿ ಇಂತಹ ಸಮಸ್ಯೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.



