ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾದ್ಯಂತ ಎರಡು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪದ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಹಾಗೂ ಸೋಮವಾರ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ಇನ್ನು ಚೆನ್ನಮ್ಮ ಅವರ ಅಂತ್ಯಸಂಸ್ಕಾರಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಶಾಸಕ ಸಿ.ಎನ್. ಬಾಲಕೃಷ್ಣ ಅವರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸುತ್ತಿದ್ದಾರೆ.
ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 11 ಗಂಟೆಯವರೆಗೆ ಹೊಳೆನರಸೀಪುರದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬಳಿಕ ಪೂಜಾ ವಿಧಿವಿಧಾನಗಳು ನೆರವೇರಲಿದ್ದು, ನಂತರ ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಕ್ಯಾತನಹಳ್ಳಿಗೆ ತರಲಾಗುತ್ತದೆ. ಅಲ್ಲಿ ಕೆಲಕಾಲ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ನೀಡಿದ ಬಳಿಕ ಮಧ್ಯಾಹ್ನ 2 ಗಂಟೆಯ ನಂತರ ಅಂತ್ಯಕ್ರಿಯೆ ನೆರವೇರಲಿದೆ.
ಚೆನ್ನಮ್ಮ ಅವರ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದ್ದಾರೆ.



