ಬೆಂಗಳೂರು:- ಮಾಧ್ಯಮಗಳ ಮುಂದೆ ಬಹಿರಂಗವಾಗಿ ಸಿಎಂ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ನೋಟಿಸ್ ಕೊಟ್ಟು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಮುಖ್ಯಮಂತ್ರಿಗಳ ಬದಲಾವಣೆ ವಿಷಯದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡುವಂತಹ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿರುತ್ತೀರಿ. ತಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುವುದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ. ತಮ್ಮ ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಈ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ತಾವುಗಳು ಈ ನೋಟಿಸ್ ತಲುಪಿದ ಒಂದು ವಾರದ ಒಳಗಾಗಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡಲು ಸೂಚಿಸಲಾಗಿದೆ.
ಇನ್ನೂ ಕರ್ನಾಟಕ ಕಾಂಗ್ರೆಸ್ ನಲ್ಲಿ ಶಾಸಕರ ಅಸಮಾಧಾನದ ಕಿಚ್ಚು ಕಾವೇರುತ್ತಿದೆ. ಒಬ್ಬೊಬ್ಬರದ್ದು ಒಂದೊಂದು ಕಥೆ, ಮುನಿಸು, ಬೇಸರ. ಹೀಗಾಗಿ ಈ ಕಿಚ್ಚು ಮತ್ತಷ್ಟು ಸ್ಫೋಟಗೊಳ್ಳುವ ಮೊದಲೇ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಶಾಸಕರ ಅಸಮಾಧಾನ ತಣಿಸಲು ಬಂದಿದ್ದಾರೆ. ಆದ್ರೆ ಸುರ್ಜೇವಾಲ ಸಭೆ ಪಕ್ಷದ ನಾಯಕರ ಅಸಮಾಧಾನ ತಣಿಸೋ ಬದಲು ಬಹಿರಂಗ ಕಿತ್ತಾಟಕ್ಕೆ ವೇದಿಕೆ ಮಾಡಿಕೊಟ್ಟಿದ್ದು, ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಬಹಿರಂಗವಾಗಿ ಅಬ್ಬರಿಸಿದ್ದಾರೆ. ಹೀಗಾಗಿ ಇದೀಗ ಅವರಿಗೆ ಡಿಕೆಶಿ ಶಾಕ್ ಕೊಟ್ಟಿದ್ದಾರೆ.



