ಚಿಕ್ಕಬಳ್ಳಾಪುರ: ಬಾವಿಗೆ ಬಿದ್ದು ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕುಡುವತಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕಲ್ಪನಾ (39) ಎಂದು ಗುರುತಿಸಲಾಗಿದೆ. ಸುಮಾರು 20 ವರ್ಷಗಳ ಹಿಂದೆ ಕುಡುವತಿ ಗ್ರಾಮದ ತಮ್ಮೇಗೌಡ ಎಂಬುವರೊಂದಿಗೆ ಕಲ್ಪನಾ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಕಲ್ಪನಾ ಕುಡುವತಿ ಗ್ರಾಮದ ತಮ್ಮ ತವರು ಮನೆಯಲ್ಲಿದ್ದರು ಎನ್ನಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯ ಸಾವಿನ ನಿಖರ ಕಾರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



