ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಐಟಿ ಕಂಪನಿಯ ಉದ್ಯೋಗಿ ಅಭಿಷೇಕ್ (27) ಮುಳುಗಿ ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪ ನಡೆದಿದೆ.
ಅಭಿಷೇಕ್ ಅವರು ಸ್ನೇಹಿತನ ಮದುವೆ ನಿಮಿತ್ತ ಸ್ನೇಹಿತರೊಂದಿಗೆ ಬನ್ನೂರು ಗ್ರಾಮದ ಹೋಂಸ್ಟೇನಲ್ಲಿ ತಂಗಿದ್ದರು. ಈ ವೇಳೆ ಸ್ನೇಹಿತರೊಂದಿಗೆ ಭದ್ರಾ ನದಿಗೆ ಈಜಲು ತೆರಳಿದಾಗ, ಆಕಸ್ಮಿಕವಾಗಿ ನೀರಿನಲ್ಲಿ ನಾಪತ್ತೆಯಾಗಿದ್ದರು.
ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಬನ್ನೂರು ಗ್ರಾಮದ ಸಮೀಪದಲ್ಲೇ ಅಭಿಷೇಕ್ ಅವರ ಮೃತದೇಹ ಪತ್ತೆಯಾಯಿತು.
ಮೃತ ಅಭಿಷೇಕ್ ಗದಗ ಮೂಲದವರಾಗಿದ್ದು, ಬೆಂಗಳೂರಿನ ಐಟಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



