ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ 13 ವರ್ಷದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಕದ ಮನೆಯ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯಲಹಂಕದ ವಿನಾಯಕ ನಗರದ ನಿವಾಸಿ ಪ್ರಜ್ವಲ್ ಮೃತ ಬಾಲಕ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಪಕ್ಕದ ಮನೆಯ ಭಾಸ್ಕರ್ ರೆಡ್ಡಿ ಎಂಬಾತ ಬಾಲಕನನ್ನು ಕಾರಿನಲ್ಲಿ ಕರೆದೊಯ್ದಿದ್ದ. ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಪಟಾಕಿ ತರಲು ಹೋಗೋಣ ಎಂದು ಹೇಳಿ ಬಾಲಕನನ್ನು ಕಾರಿನಲ್ಲಿ ಕರೆದೊಯ್ದಿದ್ದ ಎನ್ನಲಾಗಿದೆ. ಬಳಿಕ ಬಾಲಕನನ್ನು ಕಾರಿನಲ್ಲೇ ಇರಿಸಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.
ಬಾಲಕನಿಂದಲೇ ವಿಡಿಯೋ ಮಾಡಿಸಿ ಆತನ ಪೋಷಕರಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಬಳಿಕ ಮದ್ಯದ ಅಮಲಿನಲ್ಲಿ ಬಾಲಕನ ಮೇಲೆ ಹಲ್ಲೆ ನಡೆಸಿ, ಹಾಲೋಬ್ರಿಕ್ಸ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ಕೊಲೆ ಬಳಿಕ ಬಾಲಕನ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿಟ್ಟು ಭಾಸ್ಕರ್ ರೆಡ್ಡಿ ಆಂಧ್ರಪ್ರದೇಶದ ಕಡೆಗೆ ತೆರಳುತ್ತಿದ್ದ ಎನ್ನಲಾಗಿದೆ. ಈ ವೇಳೆ ಆತಂಕಗೊಂಡಿದ್ದ ಆರೋಪಿ ಕಾರನ್ನು ಗೋಡೆಗೆ ಡಿಕ್ಕಿ ಹೊಡೆಸಿಕೊಂಡಿದ್ದಾನೆ. ನಂತರ ಬಳ್ಳಾರಿ ಸರ್ವೀಸ್ ರಸ್ತೆಯಲ್ಲಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಸರಣಿ ಅಪಘಾತಕ್ಕೆ ಕಾರಣನಾಗಿದ್ದಾನೆ.
ಅಪಘಾತದ ಬಳಿಕ ಸ್ಥಳೀಯರು ಭಾಸ್ಕರ್ ರೆಡ್ಡಿಯನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಚಿಕ್ಕಜಾಲ ಪೊಲೀಸರು ಕಾರನ್ನು ಪರಿಶೀಲಿಸಿದಾಗ ಡಿಕ್ಕಿಯಲ್ಲಿದ್ದ ಬಾಲಕನ ಮೃತದೇಹ ಪತ್ತೆಯಾಗಿದೆ.
ಪೊಲೀಸರ ವಿಚಾರಣೆ ವೇಳೆ ಬಾಲಕ ಅಪಘಾತದಲ್ಲಿ ಮೃತಪಟ್ಟಿದ್ದಾನೆ ಎಂದು ಆರೋಪಿ ಹೇಳಿಕೆ ನೀಡಿದ್ದ ಎನ್ನಲಾಗಿದೆ. ಆದರೆ ಪ್ರಾಥಮಿಕ ತನಿಖೆಯಲ್ಲಿ ಬಾಲಕನನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಭಾಸ್ಕರ್ ರೆಡ್ಡಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.



