ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳ ರಕ್ಷಣೆ ಕಾರ್ಯದಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಬೇರೆ ಬೇರೆ ರೀತಿಯಲ್ಲಿ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಈ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ಕಾರ್ಯದಲ್ಲಿ ಆಸಕ್ತಿ ವಹಿಸಿ, ಕರ್ತವ್ಯ ಚ್ಯುತಿಯಾಗದಂತೆ ಶ್ರದ್ಧೆಯಿಂದ ಕೆಲಸ ನಿರ್ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ತಿಳಿಸಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರ ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ/ಸಿಬ್ಬಂದಿಗಳಿಗೆ ಬಾಲ್ಯವಿವಾಹ, ಫೋಕ್ಸೋ, ಭ್ರೂಣ ಹತ್ಯೆ, ಮಕ್ಕಳ ಸಾಗಾಣಿಕೆ ಮತ್ತು ಮಾರಾಟ ಹಾಗೂ ವಲಸೆ ಕುಟುಂಬದ ಮಕ್ಕಳ ರಕ್ಷಣೆ ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಬೇಕು. ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಅವರ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಅಂತಹ ಮಕ್ಕಳು ಭವಿಷ್ಯದಲ್ಲಿ ಉನ್ನತ ಹುದ್ದೆ ಅಲಂಕರಿಸಲು ಸಾಧ್ಯವಾಗುತ್ತದೆ. ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮದ ಕುರಿತು ಮಕ್ಕಳಿಗೆ ತಿಳುವಳಿಕೆ ನೀಡಬೇಕು. ಬಾಲ್ಯ ವಿವಾಹದ ನಿಷೇಧ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಉದಾಸೀನ ಮಾಡದೇ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಸಲು ಮಕ್ಕಳ ಸಾಗಾಣಿಕೆ ಮತ್ತು ಮಾರಾಟ ಮಾಡಲಾಗುತ್ತದೆ. ಮಕ್ಕಳನ್ನು ಇಂತಹ ಅಪಾಯಕಾರಿ ಸನ್ನಿವೇಶದಿಂದ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕುರಿತು ಜಾಗೃತಿ ಮೂಡಿಸಬೇಕು. ಆರ್.ಟಿ.ಇ ಕಾಯ್ದೆ ಸರ್ಕಾರದ ಮಹತ್ತರ ಕಾಯ್ದೆಯಾಗಿದ್ದು, ಶಾಲೆಯಲ್ಲಿ ಮಕ್ಕಳ ಹಾಜರಾತಿ ಕಡೆಗೆ ಶಿಕ್ಷಕರು ಹಾಗೂ ಪ್ರಾಚಾರ್ಯರು ಗಮನ ಹರಿಸಬೇಕೆಂದು ಶೇಖರಗೌಡ ರಾಮತ್ನಾಳ ತಿಳಿಸಿದರು.
ವಕೀಲರಾದ ಜೆ.ಸಿ. ರೇಶ್ಮಿ ಮಾತನಾಡುತ್ತಾ, ಬಾಲ್ಯ ವಿವಾಹದಂತಹ ಅನಿಷ್ಟ ಪಿಡುಗು ತಡೆಗಟ್ಟಲು ವಿವಿಧ ಇಲಾಖೆಗಳು ನಿರ್ಲಕ್ಷö್ಯ ವಹಿಸದೇ ಕೆಲಸ ನಿರ್ವಹಿಸಬೇಕು. ಕಾನೂನಿನಲ್ಲಿ ಇರುವ ಅವಕಾಶಗಳು ಗೊತ್ತಿದ್ದರೂ ಸಹಿತ ಅವುಗಳ ಸದ್ಭಳಕೆ ಮಾಡಿಕೊಳ್ಳುವ ಮನೋಭಾವ ಜನರಿಗೆ ಇರಬೇಕು. ಕಾಯ್ದೆ ಜಾರಿ ಮಾಡಿದ ನಂತರ ಅದರ ಪರಿಣಾಮಕಾರಿ ಅನುಷ್ಠಾನವೂ ಸಹ ಮುಖ್ಯವಾಗಿದೆ ಎಂದರು.
ವಕೀಲರಾದ ಗುರುರಾಜ ಗೌರಿ ಫೋಕ್ಸೋ ಕಾಯ್ದೆ 2012 ಕುರಿತು ಉಪನ್ಯಾಸ ನೀಡಿದರು. ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಮಕ್ಕಳ ರಕ್ಷಣಾ ಆಯೋಗದ ಮಾಹಿತಿ ಫಲಕವನ್ನು ಉದ್ಘಾಟಿಸಿದರು. ಕಾರ್ಯಾಗಾರದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಧಾ ಮಣ್ಣೂರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕಾ ಹಳ್ಳೂರ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಮಲ್ಲಪ್ಪ ಹೊಸಳ್ಳಿ ಕಾರ್ಯಕ್ರಮ ನಿರೂಪಿಸಿದರು.