HomeGadag Newsಮಕ್ಕಳಿಗೆ ಶಿಕ್ಷಣ ಸಾಂವಿಧಾನಿಕ ಹಕ್ಕು

ಮಕ್ಕಳಿಗೆ ಶಿಕ್ಷಣ ಸಾಂವಿಧಾನಿಕ ಹಕ್ಕು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮದ ಕುರಿತು ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಅರಿವು ಮೂಡಿಸಿ ಈ ಪದ್ಧತಿಯನ್ನು ನಿರ್ಮೂಲನೆ ಮಾಡಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಗುರುವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ ಗದಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಗದಗ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕುಟುಂಬದಲ್ಲಿನ ಬಡತನ, ಅನಕ್ಷರತೆ, ಶಿಕ್ಷಣದ ಮಹತ್ವದ ಕುರಿತು ಅರಿವಿಲ್ಲದಿರುವುದು, ವಲಸೆ ಹೋಗುವುದು, ತೀವ್ರತರಹದ ಕಾಯಿಲೆಯಿಂದ ಬಳಲುತ್ತಿರುವ ಪೋಷಕರು, ಅಸ್ಪೃಶ್ಯತೆ ಹೀಗೆ ಅನೇಕ ಕಾರಣಗಳಿಂದ ಮಕ್ಕಳು ಶಾಲೆಗೆ ಹೋಗದೇ ಕೆಲಸಕ್ಕೆ ಹೋಗಿ ಬಾಲಕಾರ್ಮಿಕರಾಗುತ್ತಾರೆ. ಮಕ್ಕಳ ರಕ್ಷಣೆ ಒದಗಿಸುವುದು ಹಾಗೂ ಕಡ್ಡಾಯವಾಗಿ ಶಿಕ್ಷಣ ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮಕ್ಕಳಿಗೆ ಶಿಕ್ಷಣ ಒದಗಿಸುವುದು ಸಾಂವಿಧಾನಿಕ ಹಕ್ಕು. ಮಕ್ಕಳಿಗೆ ಅವರ ಹಕ್ಕುಗಳ ಕುರಿತು ತಿಳುವಳಿಕೆ ನೀಡಬೇಕು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯ ಮಕ್ಕಳನ್ನು ದೈಹಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯ ಅವಕಾಶಗಳನ್ನು ತಡೆಗಟ್ಟುತ್ತದೆ ಎಂದರು.

ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಎಂ.ಎ. ನಾಯಕ ಮಾತನಾಡಿ, ಪ್ರತಿ ಮಗುವಿಗೂ ಕಡ್ಡಾಯ ಶಿಕ್ಷಣ ಒದಗಿಸಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು. ಮಕ್ಕಳಿಗೆ ಉದ್ಯೋಗ ಆಧಾರಿತ ಶಿಕ್ಷಣ ರೂಢಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಡಿಎಸ್‌ಪಿ ಮುರ್ತುಜಾ ಖಾದ್ರಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಯದೇವಿ ಕವಲೂರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ರಫೀಕಾ ಹಳ್ಳೂರ, ಕಾರ್ಮಿಕ ನಿರೀಕ್ಷಕರು ಸೇರಿದಂತೆ ಶಾಸ್ತ್ರಿಜಿ, ಸಿಡಿಓ, ಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು ಹಾಜರಿದ್ದರು.

ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸಂದೇಶ ಪಾಟೀಲ ಸ್ವಾಗತಿಸಿದರು. ಎಂ.ಎ. ಯರಗುಡಿ ಕಾರ್ಯಕ್ರಮ ನಿರೂಪಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಬಾಲ ಕಾರ್ಮಿಕ ವಿರೋಧಿ ಪ್ರಮಾಣವಚನ ಬೋಧಿಸಿ ಮಾತನಾಡಿ, ಬಾಲ ಕಾರ್ಮಿಕತೆಗೆ ಅಸಹಾಯಕತೆ ಮುಖ್ಯ ಕಾರಣವಾಗಿದೆ. ಈ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿ ಅನ್ಯಾಯದ ವಿರುದ್ಧ ಹೋರಾಡುವ ಶಕ್ತಿ ಬೆಳೆಸಬೇಕು. ಸರ್ಕಾರವು ಮಕ್ಕಳ ಸುರಕ್ಷತೆ ಹಾಗೂ ಶ್ರೇಯೋಭಿವೃದ್ಧಿಗಾಗಿ ಹಲವಾರು ಸೌಲಭ್ಯಗಳನ್ನು ಜಾರಿಗೆ ತಂದಿದೆ. ಬಾಲ ಕಾರ್ಮಿಕತೆ ಕುರಿತು ನಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿರುವವರಿಗೆ ಅರಿವು ಮೂಡಿಸಬೇಕು. ಬಾಲ ಕಾರ್ಮಿಕರು ಕಂಡುಬಂದಲ್ಲಿ ಸಹಾಯವಾಣಿ ಸಂಖ್ಯೆ-1098ಗೆ ಕರೆ ಮಾಡಬೇಕು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!