ಚಿತ್ರದುರ್ಗ: ಹೆಗ್ಗೆರೆ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ಬೆಳಗ್ಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ ಘಟನೆ ನಡೆದಿದೆ.
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 44 ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್, ಹೆಗ್ಗೆರೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಉರುಳಿ ಬಿದ್ದಿದೆ. ಬಸ್ ಪಲ್ಟಿಯಾದ ರಭಸಕ್ಕೆ ಕ್ಷಣಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬಸ್ಸಿನಲ್ಲಿ ಒಟ್ಟು 44 ಪ್ರಯಾಣಿಕರಿದ್ದು, ಅಪಘಾತದಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಂತರ ಗಾಯಾಳುಗಳು ಚೇತರಿಸಿಕೊಂಡು ಮನೆಗಳಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಚಳ್ಳಕೆರೆ ಪೊಲೀಸರು, ಕ್ರೇನ್ ಸಹಾಯದಿಂದ ರಸ್ತೆ ಮಧ್ಯೆ ಬಿದ್ದಿದ್ದ ಬಸ್ಸನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಬಸ್ ವೇಗವಾಗಿ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



