ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದ ಮಹಿಳಾ ಜೈಲರ್ ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ನವೆಂಬರ್ 9ರ ರಾತ್ರಿ ಊಟದ ಸಮಯದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಜೈಲು ಅಧೀಕ್ಷಕಿ ದೀಪಾ ಅವರು ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಚಿಕ್ಕಮಗಳೂರು ಕಾರಾಗೃಹದ ಬ್ಯಾರಕ್ ಸಂಖ್ಯೆ 1ರಲ್ಲಿ ನವೆಂಬರ್ 9ರ ರಾತ್ರಿ ವಿಚಾರಣಾಧೀನ ಕೈದಿಗಳ ನಡುವೆ ಗಲಾಟೆ ನಡೆದಿದೆ. ಕೈದಿಗಳಾದ ಅಹ್ಮದ್ ಖಾನ್, ಅಸ್ಪಾನ್ ಇರ್ಷಾದ್ ಅಹ್ಮದ್, ಹರ್ಶಿತ್ ಹಾಗೂ ಅವಿನಾಶ್ ದೊಂಡ್ರೇ ನಡುವೆ ಊಟದ ಸಮಯದಲ್ಲಿ ಜಗಳ ಆರಂಭವಾಗಿದೆ ಎಂದು ತಿಳಿದುಬಂದಿದೆ.
ಕೈದಿಗಳ ನಡುವೆ ಗಲಾಟೆ ನಡೆಯುತ್ತಿರುವ ವಿಚಾರ ತಿಳಿದ ಜೈಲರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಘಟನೆ ಕುರಿತು ವಿಚಾರಿಸಲು ಮುಂದಾಗಿದ್ದಾರೆ. ಈ ವೇಳೆ ಆರೋಪಿಗಳು ಜೈಲರ್ ಹಾಗೂ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ, ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸಿಬ್ಬಂದಿಗೆ ಜೀವ ಬೆದರಿಕೆಯನ್ನೂ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಘಟನೆಯ ಹಿನ್ನೆಲೆಯಲ್ಲಿ ಜೈಲು ಅಧೀಕ್ಷಕಿ ದೀಪಾ ಅವರು ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಜೈಲಿನೊಳಗೆ ಗಲಾಟೆ ನಡೆಸಿ, ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಬೆದರಿಕೆ ಹಾಕಿರುವ ಕುರಿತು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗಲಾಟೆಯಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ನಾಲ್ವರು ವಿಚಾರಣಾಧೀನ ಕೈದಿಗಳು ವಿವಿಧ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರಾಗೃಹದಲ್ಲಿದ್ದಾರೆ. ದರೋಡೆ, ಕೊಲೆ ಯತ್ನ ಹಾಗೂ ಪೋಕ್ಸೊ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ಆರೋಪಿಗಳಾಗಿ ಜೈಲು ಸೇರಿದ್ದರು ಎಂದು ತಿಳಿದುಬಂದಿದೆ.
ಕಾರಾಗೃಹದೊಳಗೆ ಕೈದಿಗಳ ನಡುವೆ ನಡೆದ ಗಲಾಟೆ ಹಾಗೂ ಜೈಲು ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿರುವ ಆರೋಪವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ.








