ದಾವಣಗೆರೆ/ವಿಜಯನಗರ: ಪ್ರೀತಿಸಿ ಮದುವೆಯಾದ ಜೋಡಿಯ ವಿಚಾರವಾಗಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಹರಪನಹಳ್ಳಿ ತಾಲೂಕಿನ ಸತ್ತೂರು ಗೊಲ್ಲರಹಟ್ಟಿಯಲ್ಲಿ ಎರಡು ಸಮುದಾಯದವರ ನಡುವೆ ಮಾರಾಮಾರಿ ನಡೆದಿದ್ದು, ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಾಲ್ಕು ದಿನಗಳ ಹಿಂದಷ್ಟೇ ಗ್ರಾಮದ ಯುವಕ ಮತ್ತು ಯುವತಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಈ ಮದುವೆಗೆ ಯುವತಿಯ ಸಮುದಾಯದವರಿಂದ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಆಕ್ರೋಶಗೊಂಡ ಯುವತಿಯ ಸಮುದಾಯದ ನೂರಾರು ಯುವಕರು ಹಾಗೂ ಕುಟುಂಬಸ್ಥರು, ಯುವಕನ ಮನೆಗೆ ನುಗ್ಗಿ ಆತನ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆಯ ವೇಳೆ ಮಹಿಳೆಯರು, ಮಕ್ಕಳು ಎಂಬ ಭೇದವಿಲ್ಲದೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಈ ಗಲಾಟೆಯ ದೃಶ್ಯಗಳು ಮನೆಯ ಸಿಸಿ ಕ್ಯಾಮೆರಾ ಹಾಗೂ ಮೊಬೈಲ್ನಲ್ಲಿ ಸೆರೆಯಾಗಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಕುಟುಂಬದ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಯುವಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.









