ಚಿತ್ರದುರ್ಗ: ನಗರದ ಸಂತೆಮೈದಾನ ಬಳಿಯ ಮೊಬೈಲ್ ಅಂಗಡಿಯಲ್ಲಿ ನಡೆದ ತೀವ್ರ ವಾಗ್ವಾದ ಕೊನೆಗೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಿರುಗಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಅಂಗಡಿ ಮಾಲೀಕ ವಿಕ್ರಮ್ ಚೌದ್ರಿ ಅವರಿಗೆ ಚಾಕು ಇರಿತ ನಡೆಸಲಾಗಿದೆ.
ಮಾಹಿತಿಯ ಪ್ರಕಾರ, ಮೊಬೈಲ್ ಸ್ಕ್ರೀನ್ ಗಾರ್ಡ್ ಖರೀದಿಸಿದ್ದ ಯುವಕನು ಅದನ್ನು ಬದಲಾಯಿಸಲು ಅಂಗಡಿಗೆ ಬಂದಿದ್ದಾನೆ. ಬೇರೆ ಬ್ರ್ಯಾಂಡ್‌ನ ಸ್ಕ್ರೀನ್ ಗಾರ್ಡ್ ನೀಡಲು ಹೆಚ್ಚುವರಿ ₹100 ನೀಡುವಂತೆ ವಿಕ್ರಮ್ ಕೇಳಿದ್ದರೆಂದು ಹೇಳಲಾಗುತ್ತಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯುವಕನೊಂದಿಗೆ ಮಾತಿನ ಚಕಮಕಿ ಉಂಟಾಗಿ, ತೀವ್ರ ವಾಗ್ವಾದದ ನಡುವೆ ಚಾಕು ಇರಿತ ನಡೆದಿದೆ ಎಂದು ಆರೋಪಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ವಿಕ್ರಮ್ ಚೌದ್ರಿಯನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಸುದ್ದಿ ಹರಡುತ್ತಿದ್ದಂತೆ ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ಹಿಂದೂ ಕಾರ್ಯಕರ್ತರು ಹಾಗೂ ಶ್ರೀರಾಮ ಸೇನೆ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದರು. ಕೆಲವರು ರಸ್ತೆ ಬಂದ್ ಮಾಡಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಆರೋಪಿಯನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇಲ್ಲವಾದರೆ ನಾಳೆ ಚಿತ್ರದುರ್ಗ ಬಂದ್‌ಗೆ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದರು.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಗಾಯಾಳುವಿನ ಆರೋಗ್ಯ ವಿಚಾರಿಸಿದ ಅವರು, ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಶಾಂತಿ ಕಾಪಾಡಲು ಮನವಿ ಮಾಡಿದರು.
ಜಿಲ್ಲಾಸ್ಪತ್ರೆ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



