ವಿಜಯಸಾಕ್ಷಿ ಸುದ್ದಿ, ಬೆಂಗಳೂರು : ಶಕ್ತಿ ಯೋಜನೆಯಿಂದಾಗಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಶೇ 50ರಷ್ಟು ಹೆಚ್ಚಾಗಿದೆ. ಈ ಕ್ಷೇತ್ರಗಳಲ್ಲಿ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವ್ಯಾಪಕ ಅವಕಾಶವಿದೆ. ದಕ್ಷಿಣ ಭಾರತ ಉತ್ಸವದ ಮೂಲಕ ಹರಿದು ಬಂದಿರುವ ಸುಮಾರು 4200 ಕೋಟಿ ರೂಪಾಯಿಗಳ ಹೂಡಿಕೆಯ ಜೊತೆಗೆ ಇನ್ನಷ್ಟು ಹೆಚ್ಚು ಹಣವನ್ನು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಬಳಸುವಂತೆ ಪ್ರವಾಸೋದ್ಯಮ ಹಾಗೂ ಕಾನೂನು ಸಚಿವ ಡಾ. ಎಚ್.ಕೆ. ಪಾಟೀಲ ಕರೆ ನೀಡಿದರು.
ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ದಕ್ಷಿಣ ಭಾರತ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದಕ್ಷಿಣ ಭಾರತ ರಾಜ್ಯಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಅವುಗಳಲ್ಲಿ ಹೂಡಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಎಫ್‌ಕೆಸಿಸಿಐ ಆಯೋಜಿಸಿರುವ ಈ ಕಾರ್ಯಕ್ರಮ ಬಹಳ ಮಹತ್ವದ್ದಾಗಿದೆ. ಈ ಉತ್ಸವದ ಮೂಲಕ ಸುಮಾರು 4200 ಕೋಟಿ ರೂಗಳಷ್ಟು ಹೂಡಿಕೆಯ ಪ್ರಸ್ತಾವನೆಗಳಿಗೆ ಒಡಂಬಡಿಕೆ ಆಗುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಫ್‌ಕೆಸಿಸಿಐ ಪದಾಧಿಕಾರಿಗಳ ಕಾರ್ಯ ಅಭಿನಂದನೆಗೆ ಅರ್ಹವಾಗಿದೆ.
ದಕ್ಷಿಣ ಭಾರತ ಸಾಂಸ್ಕೃತಿಕ ಪ್ರವಾಸೋದ್ಯಮದ ಪ್ರಮುಖ ತಾಣವಾಗಿದೆ. ಈ ಉತ್ಸವದ ಮೂಲಕ ದಕ್ಷಿಣ ಭಾರತ ರಾಜ್ಯಗಳ ಐತಿಹಾಸಿಕ, ಪಾರಂಪರಿಕ, ಸ್ಮಾರಕ ಸಂಪನ್ಮೂಲಗಳಲ್ಲಿನ ಅವಕಾಶಗಳನ್ನು ತೋರಿಸುವ ವೇದಿಕೆಯನ್ನು ನೀಡಲಾಗಿದೆ. ಎಲ್ಲರೂ ಜೊತೆಗೂಡಿ ವಿಶ್ವ ಪ್ರವಾಸೋದ್ಯಮ ಭೂಪಟದಲ್ಲಿ ಉತ್ತಮ ಸ್ಥಾನ ಪಡೆದುಕೊಳ್ಳವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗೋಣ ಎಂದು ಕರೆ ನೀಡಿದರು.
ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಮಾತನಾಡಿ, ದಕ್ಷಿಣ ಭಾರತ ರಾಜ್ಯಗಳನ್ನು ಒಂದೇ ವೇದಿಕೆಯ ಅಡಿಯಲ್ಲಿ ತರುವ ಪ್ರಯತ್ನಕ್ಕೆ ಯಶಸ್ಸು ದೊರೆತಿದೆ. ಕೈಗಾರಿಕಾ ಉತ್ಪಾದನೆ, ಕೃಷಿಯ ನಂತರ ಹೆಚ್ಚಿನ ಉದ್ಯೋಗಾವಕಾಶಗಳನ್ನ ಮತ್ತು ಹೂಡಿಕೆಯ ಅವಕಾಶ ಇರುವುದು ಪ್ರವಾಸೋದ್ಯಮ ಕ್ಷೇತ್ರದಲ್ಲಿ.
ಈ ಉತ್ಸವದ ಮೂಲಕ ಎಫ್‌ಕೆಸಿಸಿಐ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡುವಂತೆ ಉದ್ದಿಮೆದಾರರನ್ನು ಪ್ರೋತ್ಸಾಹಿಸಿದೆ. ಇದರಿಂದಾಗಿ ಸುಮಾರು 4200 ಕೋಟಿ ರೂ.ಗಳಷ್ಟು ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲೂ ಎಫ್‌ಕೆಸಿಸಿಐ ವತಿಯಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರೋತ್ಸಾಹ ನೀಡಲು ಆದ್ಯತೆ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಬಂಡವಾಳ ಹೂಡಿಕೆಗೆ ಮುಂದಾದ ಕೆಲವು ಉದ್ದಿಮೆದಾರರಿಗೆ ಒಡಂಬಡಿಕೆಯ ಪತ್ರಗಳನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಪ್ರವಾಸೋದ್ಯಮ ಸಚಿವ ಡಾ. ಎಚ್.ಕೆ. ಪಾಟೀಲ ವಿತರಿಸಿದರು.
ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ. ವಿ.ರಾಮ್ ಪ್ರಸಾತ್ ಮನೋಹರ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಕ್ತಿ ಯೋಜನೆಯ ಅನುಷ್ಠಾನದ ನಂತರ ರಾಜ್ಯದಲ್ಲಿ ಎಲ್ಲಾ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಶೇ.50ರಷ್ಟು ಹೆಚ್ಚಾಗಿದೆ. ಈ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನ ಹೆಚ್ಚಿಸುವುದು ಕೇವಲ ಸರಕಾರದಿಂದ ಸಾಧ್ಯವಿಲ್ಲ. ಈ ಕ್ಷೇತ್ರಗಳಲ್ಲಿ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಇಲ್ಲಿನ ಹೂಡಿಕೆಯಿಂದ ಉದ್ದಿಮೆದಾರರು ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಪ್ರವಾಸೋದ್ಯಮ ಎಂದರೆ ಕೇವಲ ಲಕ್ಸುರಿ ಪ್ರವಾಸೋದ್ಯಮ ಅಲ್ಲ, ಸಾಮಾನ್ಯ ಜನರ ಪ್ರವಾಸೋದ್ಯಮಕ್ಕೂ ಸರಕಾರ ಆದ್ಯತೆ ನೀಡುತ್ತದೆ.
– ಎಚ್.ಕೆ. ಪಾಟೀಲ.
ಕಾನೂನು, ಪ್ರವಾಸೋದ್ಯಮ ಸಚಿವರು.