ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ತೀವ್ರ ಮಳೆ ಕೊರತೆಯಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ ಕಾರ್ಯಾಚರಣೆಗೆ ಭಾನುವಾರ ಚಾಲನೆ ನೀಡಲಾಯಿತು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಹಾವೇರಿ ಜಿಲ್ಲೆಯ ಎಲ್ಲ ಶಾಸಕರ ಒಮ್ಮತದೊಂದಿಗೆ ಈ ಕಾರ್ಯ ಆರಂಭಿಸಲಾಗಿದ್ದು, ಉತ್ತರ ಕರ್ನಾಟಕದ ಇತರೆ ಜಿಲ್ಲೆಗಳಲ್ಲಿಯೂ ಮೋಡ ಬಿತ್ತನೆ ನಡೆಸಲು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಉತ್ತರ ಕರ್ನಾಟಕ ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ರೈತರ ಬೆಳೆಗಳು ಹಾನಿಗೊಳಗಾಗಿವೆ. ಬೆಳೆ ಹಾನಿ ಕುರಿತು ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಮೋಡ ಬಿತ್ತನೆಗೆ ಮುಂದಾಗಿರುವ ಎಲ್ಲ ಶಾಸಕರನ್ನು ಅಭಿನಂದಿಸುವುದಾಗಿ ಹೇಳಿದರು.
ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ಹಾವೇರಿ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಮೂರು ದಿನಗಳ ಕಾಲ ಮೋಡ ಬಿತ್ತನೆ ನಡೆಸಲಾಗುತ್ತಿದೆ. ಜುಲೈ ತಿಂಗಳ ಪೂರ್ತಿ ಮೋಡ ಬಿತ್ತನೆ ವಿಮಾನ ಹುಬ್ಬಳ್ಳಿಯಲ್ಲೇ ಇರಲಿದ್ದು, ವಿಜ್ಞಾನಿಗಳ ಸಲಹೆಯಂತೆ ಮುಂದಿನ ಕಾರ್ಯಾಚರಣೆ ಕೈಗೊಳ್ಳಲಾಗುವುದು. ಒಂದು ಗಂಟೆ ಮೋಡ ಬಿತ್ತನೆಗೆ ಸುಮಾರು ₹15 ಲಕ್ಷ ವೆಚ್ಚವಾಗಲಿದ್ದು, ಇದರಿಂದ ರೈತರ ಬೆಳೆಗಳಿಗೆ ಅನುಕೂಲವಾಗಲಿದೆ ಎಂದರು.
ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟದಲ್ಲಿರುವುದನ್ನು ಮನಗಂಡು ವೈಜ್ಞಾನಿಕ ತಂತ್ರಜ್ಞಾನದ ಮೂಲಕ ಮೋಡ ಬಿತ್ತನೆಗೆ ಚಾಲನೆ ನೀಡಲಾಗಿದೆ. ಈ ಪ್ರಯತ್ನ ಯಶಸ್ವಿಯಾಗಿ ರೈತರ ಸಂಕಷ್ಟ ನಿವಾರಣೆಯಾಗುವ ವಿಶ್ವಾಸವಿದೆ. 2001 ಹಾಗೂ 2017ರಲ್ಲೂ ಮೋಡ ಬಿತ್ತನೆ ಯಶಸ್ವಿಯಾಗಿತ್ತು ಎಂದು ನೆನಪಿಸಿದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಹಾವೇರಿಯಲ್ಲಿ ಮೋಡ ಬಿತ್ತನೆ ಮಾಡಿದ ಪರಿಣಾಮ ಧಾರವಾಡ ಜಿಲ್ಲೆಗೂ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ದಿನಗಳಲ್ಲಿ ಧಾರವಾಡ ಜಿಲ್ಲೆಯಲ್ಲೂ ಮೋಡ ಬಿತ್ತನೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು. ಹೆಸರು ಬೆಳೆ ಈಗಾಗಲೇ ಹಾನಿಗೊಳಗಾಗಿದ್ದು, ಮೋಡ ಬಿತ್ತನೆಯಿಂದ ಹತ್ತಿ, ಶೇಂಗಾ ಹಾಗೂ ಕಬ್ಬು ಬೆಳೆಗಳಿಗೆ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ರುದ್ರಪ್ಪ ಲಮಾಣಿ, ಯಾಸೀರ್ ಖಾನ್ ಪಠಾಣ, ಎಫ್.ಎಚ್. ಜಕ್ಕಪ್ಪನವರ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಹಾವೇರಿಯಲ್ಲಿ ಆರಂಭವಾದ ಮೋಡ ಬಿತ್ತನೆ ಯಶಸ್ವಿಯಾದರೆ ಉತ್ತರ ಕರ್ನಾಟಕದ ಇತರೆ ಜಿಲ್ಲೆಗಳಿಗೂ ವಿಸ್ತರಿಸಲು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗುವುದು.”
– ಸತೀಶ ಜಾರಕಿಹೊಳಿ



