ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ಕೊಳ್ಳೇಗಾಲಕ್ಕೆ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.
ಕೊಳ್ಳೇಗಾಲದ ಎಂಜಿಎಸ್ವಿ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸುಮಾರು ₹1,500 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಸೇರಿದಂತೆ ಹಲವು ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದ್ದಾರೆ.
ಕೊಳ್ಳೇಗಾಲದಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ಆಸ್ಪತ್ರೆಯ ಮೊದಲ ಹಂತದ ಕಾಮಗಾರಿ, ಅಗರ ಮಾಂಬಳ್ಳಿ ಕೆರೆಗಳಿಂದ ಬೆಂಗಳೂರು-ದಾಬಸ್ಪೇಟೆ ಕೈಗಾರಿಕಾ ಪ್ರದೇಶಕ್ಕೆ ನೀರು ಪೂರೈಕೆ ಯೋಜನೆ, ಮುಡಿಗುಂಡಂ ಸೇತುವೆ, ಯಳಂದೂರು ಸರ್ಕಾರಿ ಪದವಿ ಕಾಲೇಜು ಕಟ್ಟಡ ಹಾಗೂ ಹೊಂಗನೂರು ಹಿರಿಕೆರೆ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ.
ಇದೇ ವೇಳೆ 100 ಹಾಸಿಗೆಗಳ ಯಳಂದೂರು ಸರ್ಕಾರಿ ಆಸ್ಪತ್ರೆ, ಕೊಳ್ಳೇಗಾಲದ ಅಂಬೇಡ್ಕರ್ ಭವನ, ಮೆಟ್ರಿಕ್ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಹಾಗೂ ಸರ್ಕಾರಿ ಐಟಿಐ ಕಾಲೇಜಿನ ಹೆಚ್ಚುವರಿ ಕೊಠಡಿಗಳು ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನೂ ಸಿಎಂ ನೆರವೇರಿಸಲಿದ್ದಾರೆ.



