ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದು, ಸಿಎಂ ಬದಲಾವಣೆ ಕುರಿತಾಗಿ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹಾಗೂ ಕಾಂಗ್ರೆಸ್ ಶಾಸಕ ಕುಣಿಗಲ್ ರಂಗನಾಥ್ ಅವರು ಹೇಳಿಕೆ ನೀಡಿದ್ದರು. ಇದು ಚರ್ಚೆಯ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆಯಂತೆ ನೋಟಿಸ್ ಜಾರಿ ಮಾಡಲಾಗಿದೆ.
ಹೌದು ನೋಟಿಸ್ ತಲುಪಿದ ಒಂದು ವಾರದ ಒಳಗಡೆ ಉತ್ತರ ನೀಡುವಂತೆ ಶಿಸ್ತುಪಾಲನ ಸಮಿತಿ ಮುಖ್ಯಸ್ಥ, ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಸೂಚಿಸಿದ್ದಾರೆ. ಮಾಧ್ಯಮಗಳಿಗೆ ಮುಖ್ಯಮಂತ್ರಿಗಳ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವುದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ.
ಈ ವಿಷಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಗೊಂದಲ ಹಾಗೂ ಪಕ್ಷಕ್ಕೆ ಮುಜುಗರ ಉಂಟಾಗುವ ಬಹಿರಂಗವಾಗಿ ಹೇಳಿಕೆಗಳನ್ನು ನೀಡಬಾರದೆಂದು ಎಐಸಿಸಿ ಸೂಚನೆ ಇದ್ದಾಗ್ಯೂ ತಾವು ಈ ಬಗ್ಗೆ ಹೇಳಿಕೆ ನೀಡಿದ್ದೀರಿ.
ಈ ವಿಷಯದಲ್ಲಿ ನಿಮ್ಮ ಮಾಧ್ಯಮ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುವುದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆಗೆ ಕಾರಣವಾಗುತ್ತದೆ. ತಮ್ಮ ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಈ ಕಾರಣ ಕೇಳಿ ನೋಟೀಸು ನೀಡಲಾಗಿದೆ. ತಾವುಗಳು ಈ ನೋಟಿಸ್ ತಲುಪಿದ ಒಂದು ವಾರದ ಒಳಗಾಗಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡಲು ಸೂಚಿಸಲಾಗಿದೆ.