ರಾಮನಗರ: ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಕಾಲೇಜಿನ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ರಾತ್ರಿ ಅನಿರೀಕ್ಷಿತವಾಗಿ ಭೇಟಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಊಟ ಮಾಡಿದ ಅವರು, ಹಾಸ್ಟೆಲ್ನಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಂದಲೇ ಸಮಸ್ಯೆಗಳ ಮಾಹಿತಿ ಪಡೆದುಕೊಂಡರು.
ಹಾಸ್ಟೆಲ್ನ ಕೊಠಡಿ, ಶೌಚಾಲಯ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಪರಿಶೀಲಿಸಿದ ಸಿಎಂ, ಬೆಡ್ಶೀಟ್ ಇಲ್ಲದಿರುವುದನ್ನು ಗಮನಿಸಿರುವುದಾಗಿ ಹೇಳಿದರು. ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಅವರಿಂದಲೇ ಬರೆಸಿಕೊಂಡಿದ್ದು, ಅವುಗಳನ್ನು ಉಪ ಆಯುಕ್ತರು ಹಾಗೂ ಸಿಇಒ ಅವರಿಗೆ ಕಳುಹಿಸಿ ಮರು ಪರಿಶೀಲನೆ ನಡೆಸಿ ಪರಿಹರಿಸಲಾಗುವುದು ಎಂದು ತಿಳಿಸಿದರು.
ಕಲಬುರಗಿ, ರಾಯಚೂರು, ಬೀದರ್, ಹಾವೇರಿ, ಬೆಂಗಳೂರು ಹಾಗೂ ಬಳ್ಳಾರಿ ಜಿಲ್ಲೆಗಳ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವಿದ್ದರೂ, ಕನಕಪುರದಲ್ಲಿ ಕೆಂಪು ಬಸ್ಗಳು ನಿಲ್ಲುತ್ತಿಲ್ಲ ಎಂಬ ಸಮಸ್ಯೆಯನ್ನು ವಿದ್ಯಾರ್ಥಿಗಳು ಸಿಎಂ ಗಮನಕ್ಕೆ ತಂದರು. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಅವರು ಹೇಳಿದರು.
ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕನಕಪುರಕ್ಕೆ ಆಗಮಿಸಿದ್ದರೂ, ಹಾಸ್ಟೆಲ್ಗಳ ಸ್ಥಿತಿಗತಿ ತಿಳಿದುಕೊಳ್ಳುವ ಉದ್ದೇಶದಿಂದ ಒಂದು ದಿನ ಮುಂಚಿತವಾಗಿಯೇ ಬಂದಿದ್ದಾಗಿ ಸಿಎಂ ಹೇಳಿದರು. ಹಬ್ಬದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಊರುಗಳಿಗೆ ತೆರಳಿದ್ದರಿಂದ ಮೊರಾರ್ಜಿ ದೇಸಾಯಿ ವಿದ್ಯಾರ್ಥಿ ನಿಲಯ ಖಾಲಿಯಾಗಿತ್ತು. ಹೀಗಾಗಿ ಅಲ್ಲಿಗೆ ಭೇಟಿ ನೀಡಲು ಸಾಧ್ಯವಾಗಲಿಲ್ಲ ಎಂದರು.
ಹಾಸ್ಟೆಲ್ನಲ್ಲಿ ಶೇ.75ರಷ್ಟು ವ್ಯವಸ್ಥೆ ಉತ್ತಮವಾಗಿದೆ. ಉಳಿದ ವ್ಯವಸ್ಥೆಗಳನ್ನು ಕೂಡ ಸರಿಪಡಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಅವರು, ನಿಮ್ಮ ಊರಿನಂತೆ ಬಿಸಿಲು ಇದೆಯೇ ಎಂದು ಪ್ರಶ್ನಿಸಿದರು. ಮಧ್ಯಾಹ್ನ ಬಿಸಿಲು ಹೆಚ್ಚಾಗುತ್ತದೆ ಎಂದು ವಿದ್ಯಾರ್ಥಿಯೊಬ್ಬರು ಹೇಳಿದಾಗ ಎಸಿ ಹಾಕಿಸೋಣ ಎಂದು ಹಾಸ್ಯಮಯವಾಗಿ ಪ್ರತಿಕ್ರಿಯಿಸಿದರು.
ಮಳೆ ಇಲ್ಲ ಎಂದು ವಿದ್ಯಾರ್ಥಿಯೊಬ್ಬರು ಹೇಳಿದಾಗ, ನೀವು ಎಲ್ಲರೂ ಸೇರಿ ಪ್ರಾರ್ಥನೆ ಮಾಡಿ ಎಂದು ಸಿಎಂ ಹೇಳಿದರು. ಬಳಿಕ ವಿದ್ಯಾರ್ಥಿಗಳಿಗೆ ಗೌರಿ ಹಾಗೂ ಗಣೇಶ ಹಬ್ಬದ ಶುಭಾಶಯ ಕೋರಿದರು.



