ಗದಗ: ಪ್ರಸ್ತುತ ವಿಜಯನಗರ ಜಿಲ್ಲೆಯ ಮುನಿರಾಬಾದ್ನ ಇಂಡಿಯಾ ರಿಸರ್ವ್ ಬಟಾಲಿಯನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೀರೇಶ ಎ. ಜೋಳದ ಅವರು, ಈ ಹಿಂದೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗದಗ ಜಿಲ್ಲಾ ಘಟಕದಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ.
ಈ ಹಿಂದೆ ಗದಗ ಎಸಿಬಿ ಘಟಕದಲ್ಲಿ ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಅವರು ಭ್ರಷ್ಟಾಚಾರ ಪ್ರಕರಣಗಳ ಪತ್ತೆ ಮತ್ತು ತನಿಖೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ವೈಯಕ್ತಿಕವಾಗಿ 40 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪ್ರಮುಖ ಪಾತ್ರವಹಿಸಿ, ಯಾವುದೇ ಮಾಹಿತಿ ಸೋರಿಕೆಯಾಗದಂತೆ ಟ್ರ್ಯಾಪ್ ದಾಳಿ ಹಾಗೂ ಶೋಧ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ.
ಸೂಕ್ಷ್ಮ ಯೋಜನೆ, ನಿಖರ ಕಾರ್ಯಾಚರಣೆ ಮತ್ತು ದೃಢ ಸಾಕ್ಷ್ಯಾಧಾರಗಳೊಂದಿಗೆ ಪ್ರಕರಣಗಳನ್ನು ದಾಖಲಿಸುವಲ್ಲಿ ಅವರು ತೋರಿದ ನಿಪುಣತೆ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರವಾಗಿದೆ. ಭ್ರಷ್ಟಾಚಾರದ ವಿರುದ್ಧ ಕಠಿಣ ನಿಲುವು ಹೊಂದಿ ಕಾರ್ಯನಿರ್ವಹಿಸಿದ ಅವರು, ಹಲವಾರು ಆರೋಪಿಗಳನ್ನು ಕಾನೂನಿನ ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೇ ವೇಳೆ, ಸಾರ್ವಜನಿಕರಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯದಲ್ಲಿಯೂ ಮುಂಚೂಣಿಯಲ್ಲಿ ನಿಂತು, ಜನರಲ್ಲಿ ಕಾನೂನು ಅರಿವು ಮತ್ತು ನೈತಿಕತೆ ಬೆಳೆಸಲು ಶ್ರಮಿಸಿದ್ದಾರೆ. ಇದರ ಫಲವಾಗಿ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ ಗಳಿಸಿದ್ದಾರೆ.
ದೈನಂದಿನ ಕರ್ತವ್ಯದ ಜೊತೆಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಛತ್ತೀಸ್ಗಢ, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮೇಘಾಲಯ ರಾಜ್ಯಗಳಲ್ಲಿ ನಡೆದ ಚುನಾವಣಾ ಕರ್ತವ್ಯಗಳನ್ನು ಸಹ ಯಶಸ್ವಿಯಾಗಿ ನಿರ್ವಹಿಸಿರುವುದು ಅವರ ಸೇವಾ ನಿಷ್ಠೆಗೆ ಸಾಕ್ಷಿಯಾಗಿದೆ.
ಎಸಿಬಿಯಲ್ಲಿ ತೋರಿದ ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಸಿಎಂ ಪದಕ ಲಭಿಸಿರುವುದು ಗದಗ ಜಿಲ್ಲೆ ಹಾಗೂ ಹುಟ್ಟೂರು ಕೊಪ್ಪಳ ಜಿಲ್ಲೆಯ ಅಳವಂಡಿ ಗ್ರಾಮಸ್ಥರಿಗೆ ಹೆಮ್ಮೆಯ ಸಂಗತಿಯಾಗಿದೆ. ಈ ಸಾಧನೆಗೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ನೇಹಿತರು ಅಭಿನಂದನೆಗಳನ್ನು ತಿಳಿಸಿದ್ದಾರೆ.



