HomeGadag Newsಗದಗ ಬರಕ್ಕೆ ಸಿಎಂ ಸ್ಪಂದನೆ: ಶೀಘ್ರವೇ ಎರಡನೇ ಹಂತದ ಬರಪೀಡಿತ ತಾಲೂಕುಗಳ ಪಟ್ಟಿ

ಗದಗ ಬರಕ್ಕೆ ಸಿಎಂ ಸ್ಪಂದನೆ: ಶೀಘ್ರವೇ ಎರಡನೇ ಹಂತದ ಬರಪೀಡಿತ ತಾಲೂಕುಗಳ ಪಟ್ಟಿ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಬರಪೀಡಿತ ತಾಲೂಕುಗಳನ್ನು ಘೋಷಿಸುವ ಪ್ರಕ್ರಿಯೆಯನ್ನು ಸರ್ಕಾರದ ಮಾರ್ಗಸೂಚಿಗಳ ಅನುಸಾರವೇ ಕೈಗೊಳ್ಳಲಾಗುತ್ತಿದ್ದು, ವಾಸ್ತವಿಕ ಪರಿಸ್ಥಿತಿಯ ಅಧ್ಯಯನ ನಡೆಸಿ ಶೀಘ್ರವೇ ಬರಪೀಡಿತ ತಾಲೂಕುಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಗದಗ ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಕುರಿತು ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಪ್ರತಿಯೊಂದು ತಾಲೂಕಿಗೂ ಭೇಟಿ ನೀಡಿ ವಾಸ್ತವಾಂಶಗಳ ವರದಿ ನೀಡಿದ್ದಾರೆ. ಇದರೊಂದಿಗೆ ಅಧಿಕಾರಿಗಳು ಕೂಡ ಬರ ಪರಿಸ್ಥಿತಿಯ ಅಧ್ಯಯನ ನಡೆಸುತ್ತಿದ್ದಾರೆ. ಎರಡೂ ವರದಿಗಳನ್ನು ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಬೇಕಾಗಿದೆ ಎಂದು ವಿವರಿಸಿದರು.

ಗದಗ ಜಿಲ್ಲೆಯಲ್ಲಿ ರೈತರ ಬದುಕು ಅಪಾಯದಲ್ಲಿದ್ದು, ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಕಳೆದ 50 ವರ್ಷಗಳಲ್ಲೇ ಕಂಡುಬರದಷ್ಟು ಭೀಕರ ಬರ ಪರಿಸ್ಥಿತಿಗೆ ಜಿಲ್ಲೆ ತುತ್ತಾಗಿದೆ. ಈ ವರ್ಷ ಜಿಲ್ಲೆಯಲ್ಲಿ ಶೇ.40ರಷ್ಟು ಮಳೆ ಕೊರತೆಯಾಗಿದೆ. ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುವಾಗಲೂ ಹಲವು ಪ್ರದೇಶಗಳಲ್ಲಿ ಬಿತ್ತನೆಯೇ ಆಗದಿರುವುದು ಕಂಡುಬಂದಿದೆ ಎಂದು ಹೇಳಿದರು.

ಬಿತ್ತನೆ ಮಾಡಿರುವ ಪ್ರದೇಶಗಳಲ್ಲಿಯೂ ರೈತರ ಕೈಗೆ ಶೇ.10ರಿಂದ 15ರಷ್ಟು ಬೆಳೆ ಕೂಡ ಸಿಗದಂತಹ ದುಸ್ಥಿತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ತಾವು ರೈತರ ಜಮೀನುಗಳಿಗೆ ತೆರಳಿ ಹತ್ತಿ, ಕಡಲೆಕಾಯಿ, ಜೋಳ ಹಾಗೂ ಸೂರ್ಯಕಾಂತಿ ಬೆಳೆಗಳನ್ನು ಪರಿಶೀಲಿಸಿದ್ದು, ರೈತರು ಯಾವ ಪ್ರಮಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬುದು ಮನವರಿಕೆಯಾಗಿದೆ ಎಂದರು. ರೈತರೊಂದಿಗೆ ನೇರವಾಗಿ ಚರ್ಚೆ ನಡೆಸಿ ಅವರ ನೋವುಗಳನ್ನು ಆಲಿಸಲಾಗಿದೆ. ಜನರು ಉದ್ಯೋಗ ಅರಸಿ ವಲಸೆ ಹೋಗುವುದನ್ನು ತಪ್ಪಿಸಲು ವಿಬಿಜಿ ರಾಮ್ ಜಿ ಯೋಜನೆ ಯಾವ ರೀತಿಯಲ್ಲಿ ನೆರವಾಗಬೇಕು ಎಂಬ ಬಗ್ಗೆಯೂ ರೈತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಪ್ರಸ್ತುತ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಶಾಸಕರು ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಿದರು.

ಶಾಸಕ ಡಾ. ಎಚ್.ಕೆ. ಪಾಟೀಲ ಅವರು ಮೋಡ ಬಿತ್ತನೆ ಕುರಿತು ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ. ಉಳಿದ ಶಾಸಕರು ಸಹ ವಿವಿಧ ವಿಷಯಗಳ ಕುರಿತು ಸರ್ಕಾರದ ಗಮನ ಸೆಳೆದಿದ್ದಾರೆ. ನೀರಾವರಿ, ಬೆಣ್ಣೆಹಳ್ಳ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಲಾಗಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೇಂದ್ರದ ವರದಿಗೂ ಹೊಂದಾಣಿಕೆಯಾಗಬೇಕು

ರಾಜ್ಯ ಸರ್ಕಾರದ ಬರ ಪರಿಸ್ಥಿತಿ ವರದಿಯು ಕೇಂದ್ರ ಸರ್ಕಾರದ ಅಧ್ಯಯನ ವರದಿಯೊಂದಿಗೆ ಹೊಂದಾಣಿಕೆಯಾಗುವುದು ಅಗತ್ಯವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ದೆಹಲಿ ಕೇಂದ್ರದಿಂದ ಆಗಮಿಸುವ ಬರ ಅಧ್ಯಯನ ತಂಡಕ್ಕೆ ರಾಜ್ಯ ಸರ್ಕಾರದ ವರದಿ ಒಪ್ಪಿಗೆಯಾಗಬೇಕು. ಆಗ ಮಾತ್ರ ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ದೊರೆಯಲು ಸಾಧ್ಯ. ಸರ್ಕಾರ ತನ್ನ ಮಟ್ಟದಲ್ಲಿ ಕೈಗೊಳ್ಳಬೇಕಾದ ಎಲ್ಲ ಕ್ರಮಗಳನ್ನು ಈಗಾಗಲೇ ಆರಂಭಿಸಿದೆ ಎಂದು ಹೇಳಿದರು.

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ₹1 ಕೋಟಿ ಅನುದಾನ ನೀಡಲಾಗಿದ್ದು, ಜಿಲ್ಲಾಧಿಕಾರಿಗಳ ಖಾತೆಯಲ್ಲಿಯೂ ಹೆಚ್ಚುವರಿ ಹಣವನ್ನು ಲಭ್ಯವಾಗುವಂತೆ ಮಾಡಲಾಗಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಮತ್ತಷ್ಟು ಚುರುಕುಗೊಳ್ಳಬೇಕು. ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಸೆಪ್ಟೆಂಬರ್ 5ರಿಂದ ಪ್ರಜಾಸೇವಾ ಆಂದೋಲನ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸರಿಯಾದ ರೀತಿಯಲ್ಲಿ ತಲುಪಬೇಕು. ಯೋಜನೆಗಳ ದುರ್ಬಳಕೆಯಾಗಬಾರದು ಎಂಬ ಉದ್ದೇಶದಿಂದ ಮರುಪರಿಶೀಲನೆ ನಡೆಸಲಾಗುತ್ತಿದ್ದು, ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದರು.

ನಮ್ಮ ಸರ್ಕಾರ 100 ದಿನಗಳಲ್ಲಿ ಕೈಗೊಂಡಿರುವ ಕಾರ್ಯಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಯೋಜನೆಗಳ ಕುರಿತು ವಿಧಾನಸಭೆ ಅಧಿವೇಶನದಲ್ಲಿ ವಿವರಿಸಲು ನಿರ್ಧರಿಸಲಾಗಿತ್ತು. ಆದರೆ ವಿರೋಧ ಪಕ್ಷಗಳು ಅದಕ್ಕೆ ಅವಕಾಶ ನೀಡಲಿಲ್ಲ. ಆದ್ದರಿಂದ ಸರ್ಕಾರದ 100 ದಿನಗಳ ಕಾರ್ಯಕ್ರಮದ ಸಂದರ್ಭದಲ್ಲಿ ಈ ಎಲ್ಲ ವಿಷಯಗಳನ್ನು ಜನತೆಗೆ ತಿಳಿಸಲಾಗುವುದು ಎಂದು ಹೇಳಿದರು.

ಬರ ಪ್ರದೇಶ ಘೋಷಣೆಯನ್ನು ಸರ್ಕಾರ ಮಾರ್ಗಸೂಚಿಯ ಅನುಸಾರವೇ ಮಾಡಬೇಕು. ಗದಗ ಜಿಲ್ಲೆಯ ರೈತರ ಪರಿಸ್ಥಿತಿಯನ್ನು ನಾನು ಸ್ವತಃ ಕಣ್ಣಾರೆ ಕಂಡಿದ್ದೇನೆ. ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ರೈತರ ಸಂಕಷ್ಟ ತೀವ್ರವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿ, ಕೇಂದ್ರ ಸರ್ಕಾರದ ವರದಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಶೀಘ್ರವೇ ಬರಪೀಡಿತ ತಾಲೂಕುಗಳ ಎರಡನೇ ಪಟ್ಟಿಯನ್ನು ಪ್ರಕಟಿಸುತ್ತೇವೆ.

— ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img