ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ.
ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದು, ಇದೀಗ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಚಿತ್ರದುರ್ಗ ಬಳಿ ಲಾರಿ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾಗಿರುವ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿದೆ. ಕ್ರಿಸ್ಮಸ್ ರಜೆಯ ಹಿನ್ನೆಲೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ಅಂತ್ಯಗೊಂಡಿರುವುದು ಅತ್ಯಂತ ವಿಷಾದನೀಯ” ಎಂದು ಬರೆದುಕೊಂಡಿದ್ದಾರೆ.
ಅಪಘಾತದ ಕಾರಣಗಳ ಕುರಿತು ಸಮಗ್ರ ತನಿಖೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಅವರು, ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಪ್ರಾರ್ಥಿಸಿದ್ದಾರೆ.



