ಮಂಡ್ಯ:- ಇಂದಿನಿಂದ ಸಕ್ಕರೆ ನಾಡು ಮಂಡ್ಯದಲ್ಲಿ ಆಯೋಜನೆ ಮಾಡಿರುವ 87ನೇ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ಕೊಟ್ಟಿದ್ದಾರೆ.
ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ಅವರು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು. ಹೊಂಬಾಳೆ ಅರಳಿಸಿ ಕನ್ನಡ ನುಡಿ ಅರಳಲಿ ಎಂಬ ಆಶಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು.
ಸಮ್ಮೇಳನದ ಗೌರವಾಧ್ಯಕ್ಷ ಗೊರಾ ಚನ್ನಬಸಪ್ಪ ಅವರನ್ನು ಮಂಡ್ಯದ ಸರ್ ಎಂ ವಿಶ್ವೇಶ್ವರ ಅವರ ಪ್ರತಿಮೆ ಮುಂಭಾಗದಿಂದ ಸಾಹಿತ್ಯ ಸಮ್ಮೇಳನದ ವೇದಿಕೆಯವರೆಗೂ ಬೃಹತ್ ಮೆರವಣಿಗೆ ಮುಖಾಂತರ ಕರೆದುಕೊಂಡ ಬರಲಾಯಿತು.
ಸಾಹಿತ್ಯ ಸಮ್ಮೇಳನ ಸಂಬಂಧ ನಗರದಾದ್ಯಂತ ದಸಾರ ಮಾದರಿಯಲ್ಲಿ ಲೈಟಿಂಗ್ ವ್ಯವಸ್ಥೆ ಕೂಡ ಮಾಡಲಾಗಿದೆ. ಇನ್ನು ಸಾಹಿತ್ಯಸಕ್ತರಿಗಾಗಿ 450 ಪುಸ್ತಕ ಮಳಿಗೆಗಳು ಹಾಗೂ 350 ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ನುಡಿಹಬ್ಬಕ್ಕೆ ಲಕ್ಷಾಂತರ ಜನರು ಭಾಗಿಯಾಗುವ ಹಿನ್ನೆಲೆಯಲ್ಲಿ ಬಗೆ ಬಗೆಯ ಖಾದ್ಯಗಳನ್ನು ಕೂಡ ತಯಾರಿ ಮಾಡಲಾಗಿದೆ.
ಸಮ್ಮೇಳನ ಹಿನ್ನೆಲೆ, ದಕ್ಷಿಣ ವಲಯ ಡಿಐಜಿ ಡಾ.ಬೋರಲಿಂಗಯ್ಯ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. 14 ಜಿಲ್ಲೆಗಳಿಂದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ನಾಲ್ವರು ಎಸ್ಪಿ, ಆರು ಮಂದಿ ಎಸ್ಪಿ, 21 ಮಂದಿ ಡಿವೈಎಸ್ಪಿ, 63 ಮಂದಿ ಪಿಐ, 190 ಮಂದಿ ಪಿಎಸ್ಐ, 215 ಮಂದಿ ಎಎಸ್ಐ, 1700 ಮಂದಿ ಹೆಚ್ಸಿ, ಪಿಸಿ, 165 ಮಂದಿ ಮಹಿಳಾ ಪೇದೆ, 1000 ಮಂದಿ ಗೃಹರಕ್ಷಕ ದಳ, 12 ಕೆಎಸ್ಆರ್ಪಿ, 13 ಡಿಎಆರ್ ಸೇರಿ ನಾಲ್ಕು ಸಾವಿರ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.